ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೋವಿಡ್ ಪ್ರಕರಣ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಭಾರತದಲ್ಲೂ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರ, ಈಗಾಗಲೇ ರಾಜ್ಯ ಸರ್ಕಾರಗಳಿಗೆ ಕೋವಿಡ್ ಪರೀಕ್ಷೆ ಕುರಿತಂತೆ ಕೆಲವೊಂದು ಸೂಚನೆಗಳನ್ನು ನೀಡಿದೆ.
ಅಲ್ಲದೆ ಕೇಂದ್ರ ಆರೋಗ್ಯ ಸಚಿವಾಲಯ ಕೋವಿಡ್ ಇನ್ನೂ ಸಂಪೂರ್ಣವಾಗಿ ಕೊನೆಗೊಂಡಿಲ್ಲ. ಹೀಗಾಗಿ ದೇಶವಾಸಿಗಳು ಮಾಸ್ಕ್ ಧಾರಣೆ ಮಾಡುವುದು, ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
ಇದರ ಮಧ್ಯೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾಜ್ಯಸಭೆ ಕಲಾಪದಲ್ಲಿ ಪಾಲ್ಗೊಂಡಿದ್ದ ವೇಳೆ ಮಾಸ್ಕ್ ಧರಿಸಿದ್ದು, ಈ ಮೂಲಕ ದೇಶದ ಜನತೆಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ. ನರೇಂದ್ರ ಮೋದಿಯವರಲ್ಲದೆ ಕೆಲ ಕೇಂದ್ರ ಸಚಿವರು ಹಾಗೂ ಸಂಸದರು ಸಹ ಮಾಸ್ಕ್ ಧರಿಸಿರುವುದು ಕಂಡುಬಂತು.
ಕಲಾಪದ ವೇಳೆ ರಾಜ್ಯಸಭಾ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸಭಾಪತಿ ಜಗದೀಪ್ ಧನ್ಕರ್, ಸದಸ್ಯರುಗಳು ಸಾಮಾಜಿಕ ಅಂತರ ಕಾಪಾಡುವಂತೆ ತಿಳಿಸಿದರು.