ಬೆಂಗಳೂರು: ಜನವರಿ 12ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯಲಿರುವ ರಾಷ್ಟ್ರೀಯ ಯುವಜನ ಉತ್ಸವದ ಲೋಗೋ ಮತ್ತು ಮ್ಯಾಸ್ಕಾಟ್ ನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬಿಡುಗಡೆಗೊಳಿಸಿದ್ದಾರೆ.
ವರ್ಚುವಲ್ ಕಾರ್ಯಕ್ರಮದಲ್ಲಿ ಕೇಂದ್ರ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಹಾಗೂ ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಹಾಗೂ ರಾಜ್ಯದ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ಮತ್ತು ಖ್ಯಾತ ನಟಿ ತಾರಾ ಅನುರಾಧ ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಖೇಲೋ ಇಂಡಿಯಾ ಯುನಿವರ್ಸಿಟಿ ಕ್ರೀಡಾಕೂಟ ಆಯೋಜನೆ ಹಾಗೂ ಇದೀಗ ಈ ವರ್ಷ ಯುವಜನ ಉತ್ಸವ ಆಯೋಜನೆಗೆ ಅವಕಾಶ ಒದಗಿಸಿದ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು. ಯುವಜನ ಉತ್ಸವವನ್ನು ಯಶಸ್ವಿಯಾಗಿ ಆಯೋಜಿಸಲು ಸರ್ಕಾರ ಎಲ್ಲ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಯುವಜನ ಉತ್ಸವ ಸಿದ್ಧತೆಗಳ ಕುರಿತು ಚರ್ಚಿಸಲಾಯಿತು. ಇದಲ್ಲದೆ ಯುವಜನ ಮೇಳದಲ್ಲಿ ಯುವ ಶಾಸಕರು, ಸಂಸದರು ಹಾಗೂ ಇತರ ಜನಪ್ರತಿನಿಧಿಗಳ ಗೋಷ್ಠಿಯನ್ನು ಆಯೋಜಿಸಲು ತೀರ್ಮಾನಿಸಲಾಯಿತು. ವಿವಿಧ ರಾಜ್ಯಗಳಿಂದ ಆಗಮಿಸುವ ಯುವಜನರಿಗೆ ರೈಲ್ವೆ ವಿಶೇಷ ಬೋಗಿ ಅಳವಡಿಸುವ ಕುರಿತು, ರೈಲ್ವೆ ಮಂಡಳಿಯು ಒಪ್ಪಿಗೆ ನೀಡಲಾಯಿತು.