ಬೆಂಗಳೂರು: ಹವಾಮಾನ ಇಲಾಖೆ ರಾಜ್ಯದಲ್ಲಿ ಶೀತ ಮಾರುತದ ಎಚ್ಚರಿಕೆ ನೀಡಿದೆ. ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಶೀತ ಮಾರುತ ಬೀಸುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕನಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 6 ರಿಂದ 7 ಡಿಗ್ರಿ ಸೆಲ್ಸಿಯಸ್ ನಷ್ಟು ಕಡಿಮೆಯಾಗಲಿದೆ. ರಾಜ್ಯದ ಕೆಲವು ಪ್ರದೇಶಗಳಲ್ಲಿ ಸಾಮಾನ್ಯಕಿಂತ 3 ರಿಂದ 4 ಡಿಗ್ರಿ ಸೆಲ್ಸಿಯಸ್ ನಷ್ಟು ಉಷ್ಣಾಂಶ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಬೆಳಗಾವಿ, ಬಳ್ಳಾರಿ, ಶಿವಮೊಗ್ಗ, ಮಂಡ್ಯ, ದಾವಣಗೆರೆ, ಉತ್ತರ ಕನ್ನಡ, ರಾಯಚೂರು ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಉಷ್ಣಾಂಶ ಇರಲಿದೆ, ಬೆಂಗಳೂರು ಸೇರಿದಂತೆ ಹಲವೆಡೆ ದಟ್ಟ ಮಂಜು ಮುಸುಕಿದ ವಾತಾವರಣ ಇರುತ್ತದೆ ಎಂದು ಹೇಳಲಾಗಿದೆ.