ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಿಂದ ಕಣಕ್ಕಿಳಿಯಲ್ಲಿದ್ದಾರೆ ಎಂಬ ಗೊಂದಲ ಈಗಲೂ ಮುಂದುವರೆದಿದೆ. ಈ ಮೊದಲು ಕೋಲಾರದಿಂದ ತಾವು ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದರಾದರೂ ಇದರ ಜೊತೆಗೆ ಮತ್ತೊಂದು ಕ್ಷೇತ್ರದಿಂದಲೂ ಸ್ಪರ್ಧಿಸಬಹುದು ಎನ್ನಲಾಗುತ್ತಿದೆ.
ಇದರ ಮಧ್ಯೆ ಬಾಗಲಕೋಟೆಯಲ್ಲಿ ಮಾತನಾಡಿರುವ ಸಿದ್ದರಾಮಯ್ಯನವರು ಜನ, ನಾನು ಎಲ್ಲಿಂದ ಸ್ಪರ್ಧಿಸಲು ಬಯಸುತ್ತಾರೋ ಅದೇ ಕ್ಷೇತ್ರದಿಂದ ಕಣಕ್ಕಿಳಿಯುತ್ತೇನೆ ಎಂದು ಹೇಳುವ ಮೂಲಕ ಮತ್ತಷ್ಟು ಕುತೂಹಲ ಮೂಡಿಸಿದ್ದಾರೆ. ಅಲ್ಲದೆ ತಮ್ಮನ್ನು ವಲಸೆ ರಾಜಕಾರಣಿ ಎಂಬ ವಿಪಕ್ಷ ನಾಯಕರ ಹೇಳಿಕೆಯನ್ನು ತಳ್ಳಿ ಹಾಕಿದ್ದಾರೆ.
ನಾನು ಎಂಟು ಬಾರಿ ಚುನಾವಣೆಯಲ್ಲಿ ಗೆದ್ದಿದ್ದೇನೆ. ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದಲೂ ಒಂದು ಬಾರಿ ಸ್ಪರ್ಧಿಸಿದ್ದೆ. ಆದರೆ ಆ ಸಂದರ್ಭದಲ್ಲಿ ರಾಜೀವ್ ಗಾಂಧಿಯವರ ಹತ್ಯೆಯಾದ ಕಾರಣ ಸೋಲಬೇಕಾಯಿತು ಎಂದಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಚಾಮುಂಡೇಶ್ವರಿ ಹಾಗೂ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿದ್ದೆ. ಆದರೆ ಚಾಮುಂಡೇಶ್ವರಿಯಲ್ಲಿ ಸೋಲಬೇಕಾಯಿತು ಎಂದು ಅವರು ಹೇಳಿದ್ದು, ಈ ಬಾರಿಯೂ ಎರಡು ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬ ಪ್ರಶ್ನೆ ಮೂಡಿದೆ.