ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯಲ್ಲಿ ಹೊಸದಾಗಿ ಕಾಯಂ ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಅತಿಥಿ ಉಪನ್ಯಾಸಕರ ಸಂಖ್ಯೆಯನ್ನು ಹೆಚ್ಚಳ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ‘ಸ್ಪರ್ಧಾ ಅರಿವು’ ನಿಯತಕಾಲಿಕೆಯೊಂದಿಗೆ ಬಿಎ, ಬಿಕಾಂ, ಬಿಎಸ್ಸಿ, ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಅಂತಿಮ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ನೀಡಲು ಒಡಂಬಡಿಕೆ ಮಾಡಿಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಉಪನ್ಯಾಸಕರ ಸಂಖ್ಯೆಯನ್ನು ಹೆಚ್ಚಳ ಮಾಡಿ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಕಾಲೇಜುಗಳಲ್ಲಿ ಪ್ರವೇಶಾತಿ ಸಂಖ್ಯೆಯನ್ನು ಈಗಿರುವ 5 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಳ ಮಾಡುವ ಗುರಿ ಹೊಂದಲಾಗಿದೆ ಎಂದರು.
ಯುಪಿಎಸ್ಸಿ ನಡೆಸುವ ನೇಮಕಾತಿಗಳಿಗೆ ಮತ್ತು ಸ್ಟಾಫ್ ಸೆಲೆಕ್ಷನ್ ಕಮಿಷನ್ ಮೂಲಕ ಸದ್ಯದಲ್ಲೇ ನಡೆಯುವ 30,000 ಹುದ್ದೆಗಳ ನೇಮಕಾತಿಯಲ್ಲಿ ಕರ್ನಾಟಕದವರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಆಗಬೇಕೆಂಬ ಉದ್ದೇಶದಿಂದ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.