ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಾಗಿ ಹೇಳುತ್ತಿದ್ದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಈಗ ಕ್ಷೇತ್ರವನ್ನು ಖಚಿತಪಡಿಸಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ತಾವು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ತೀರ್ಮಾನಿಸಿರುವುದಾಗಿ ಅವರು ಹೇಳಿದ್ದಾರೆ.
ಸೋಮವಾರದಂದು ಕಾರ್ಕಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಈ ವಿಷಯ ತಿಳಿಸಿದ್ದು, 12 ಕ್ಷೇತ್ರಗಳಲ್ಲಿ ಪ್ರವಾಸ ನಡೆಸಿ ಕಾರ್ಯಕರ್ತರು ಸಲ್ಲಿಸಿದ ವರದಿ ಬಳಿಕ ಅಂತಿಮವಾಗಿ ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಉಡುಪಿ ಜಿಲ್ಲೆಯಲ್ಲಿ ಅತಿ ಹೆಚ್ಚು ಗೋವುಗಳ ಕಳ್ಳತನ ನಡೆಯುತ್ತಿರುವುದು ಕಾರ್ಕಳದಲ್ಲಿ ಎಂದು ಹೇಳಿದ ಅವರು, ಇಲ್ಲಿನ ಹಿಂದೂ ಕಾರ್ಯಕರ್ತರ ಹೆಸರನ್ನು ರೌಡಿ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಅಲ್ಲದೆ ಕ್ಷೇತ್ರದಲ್ಲಿ ಭ್ರಷ್ಟಾಚಾರ ವ್ಯಾಪಕ ಪ್ರಮಾಣದಲ್ಲಿದ್ದು, ಅದರ ವಿರುದ್ಧವೂ ಹೋರಾಟ ಮಾಡಬೇಕಿದೆ. ಹೀಗಾಗಿ ಕಾರ್ಕಳ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದೇನೆ ಎಂದು ತಿಳಿಸಿದರು.