ಬೆಂಗಳೂರು: ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ ಯುಜಿಸಿ ನಿಗದಿಪಡಿಸಿದ ಕನಿಷ್ಠ ಶೈಕ್ಷಣಿಕ ಅರ್ಹತೆ ಸೇರಿದಂತೆ ಎಲ್ಲಾ ನಿಯಮಗಳನ್ನು ಪರಿಗಣಿಸಿ ನೇಮಕ ಮಾಡಿಕೊಳ್ಳಬೇಕೆಂದು ಹೈಕೋರ್ಟ್ ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಕೆ.ವಿ. ರಂಜಿತ್ ನಾಯಕ್ ಮೊದಲಾದ ಐವತ್ತಕ್ಕೂ ಅಧಿಕ ಜನ ಸಲ್ಲಿಸಿದ ಅರ್ಜಿಗಳ ವಿಲೇವಾರಿ ಮಾಡಿದ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಹೈಕೋರ್ಟ್ ಏಕ ಸದಸ್ಯ ಪೀಠ ಈ ಆದೇಶ ನೀಡಿದೆ.
2022ರ ಜನವರಿ 14ರಂದು ಯುಜಿಸಿ ನಿಗದಿಪಡಿಸಿದ ಕನಿಷ್ಠ ಶೈಕ್ಷಣಿಕ ಅರ್ಹತೆ ಇಲ್ಲದ ಅಭ್ಯರ್ಥಿಗಳೂ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆದರೆ ನೇಮಕವಾದ ಮೂರು ವರ್ಷದೊಳಗೆ ವಿದ್ಯಾರ್ಹತೆ ಹೊಂದಿರಬೇಕೆಂದು ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶ ಮತ್ತು ಕೃಪಾಕ ನೀಡುವ ಕ್ರಮವನ್ನು ಅರ್ಜಿದಾರರು ಪ್ರಶ್ನಿಸಿದ್ದರು.
ಹಾಲಿ ನಡೆದ ನೇಮಕಾತಿಯಲ್ಲಿ ಮಧ್ಯಪ್ರವೇಶಿಸಲು ಹೈಕೋರ್ಟ್ ನಿರಾಕರಿಸಿದ್ದು, ಮುಂದಿನ ನೇಮಕಾತಿ ಸಂದರ್ಭದಲ್ಲಿ ಯುಜಿಸಿ ನಿಯಮ ಪರಿಗಣಿಸಲು ಸರ್ಕಾರಕ್ಕೆ ನಿರ್ದೇಶಿಸಿದೆ. ಅತಿಥಿ ಉಪನ್ಯಾಸಕರ ಸೇವೆಗೆ ಅನುಗುಣವಾಗಿ ವರ್ಷಕ್ಕೆ 3 ಅಂಕಗಳಂತೆ ಗರಿಷ್ಠ 16 ವರ್ಷಗಳ ಕೃಪಾಂಕ ನೀಡಿರುವ ಕ್ರಮ ಸರಿ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.