ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿನಲ್ಲಿ ಸೋನಿಯಾ ಗಾಂಧಿಯವರಿಗೆ ಬರೆದಂತೆ ಇರುವ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನಾನು ಯಾವುದೇ ಪತ್ರ ಬರೆದಿಲ್ಲ. ಇದು ಸಂಪೂರ್ಣ ನಕಲಿ ಹಾಗೂ ದುರುದ್ದೇಶದಿಂದ ಕೂಡಿದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರಲ್ಲದೇ ಬಿಜೆಪಿ ಕೈವಾಡ ಇದರ ಹಿಂದಿದೆ ಎಂದು ಕಿಡಿಕಾರಿದ್ದಾರೆ.
ಈ ಪತ್ರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಟಿಕೆಟ್ ಹಂಚಿಕೆ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತೆಗೆದುಕೊಳ್ಳುತ್ತಿರುವ ಕೆಲ ತೀರ್ಮಾನಗಳು ಮುಂದಿನ ದಿನಗಳಲ್ಲಿ ಬಂಡಾಯ ಹುಟ್ಟಿಕೊಳ್ಳಲು ಕಾರಣವಾಗಬಹುದು ಎಂಬ ಅಂಶವನ್ನು ಪ್ರಸ್ತಾಪಿಸಲಾಗಿತ್ತು.
ಇದಕ್ಕೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡ ನಕಲಿ ಪತ್ರವೊಂದು ಹರಿದಾಡುತ್ತಿದೆ. ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರ ಸಂಬಂಧವನ್ನು ಕೆಡಿಸುವ ದುರುದ್ದೇಶದಿಂದಲೇ ಯಾರೋ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ. ಈ ಪತ್ರಕ್ಕೂ ನನಗೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸುತ್ತಿದ್ದೇನೆ ಎಂದಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಗೆಲುವಿನ ಹಾದಿಯಲ್ಲಿರುವ ನಮ್ಮ ಪಕ್ಷದ ಬಗ್ಗೆ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವ ಉದ್ದೇಶದಿಂದಲೇ ಈ ಖೊಟ್ಟಿ ಪತ್ರವನ್ನು ಹರಿಯ ಬಿಡಲಾಗಿದೆ. ಈ ಬಗ್ಗೆ ನಾನು ಪೊಲೀಸರಿಗೆ ದೂರು ನೀಡಲಿದ್ದು, ಈ ದುಷ್ಕೃತ್ಯದ ಹಿಂದಿನ ದುರುಳರನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸುತ್ತಾರೆ ಎಂದು ನಂಬಿದ್ದೇನೆ ಎಂದು ತಿಳಿಸಿದ್ದಾರೆ.