ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರಿಸುವಂತೆ ಎನ್ ಪಿ ಎಸ್ ನೌಕರರು ಹೋರಾಟ ನಡೆಸುತ್ತಿದ್ದು, ಈ ಬಾರಿಯ ಬಜೆಟ್ ನಲ್ಲಿ ಅವರಿಗೆ ಸಿಹಿ ಸುದ್ದಿ ಸಿಗಲಿದೆಯಾ ಎಂಬ ಕುತೂಹಲ ಮೂಡಿದೆ.
ಇದಕ್ಕೆ ಪುಷ್ಟಿ ನೀಡುವಂತೆ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಇಂತಹದೊಂದು ಸುಳಿವು ನೀಡಿದ್ದು, ತಾವು ಎನ್ಪಿಎಸ್ ನೌಕರರ ಬೇಡಿಕೆ, ಪೊಲೀಸ್ ಇಲಾಖೆಯಲ್ಲಿನ ವೇತನ ತಾರತಮ್ಯ ನಿವಾರಣೆ ಸೇರಿದಂತೆ ಹಲವು ವಿಷಯಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದು, ಬಜೆಟ್ ನಲ್ಲಿ ಸಿಹಿ ಸುದ್ದಿ ಸಿಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.
ಹಳೆ ಪಿಂಚಣಿ ವ್ಯವಸ್ಥೆ ಜಾರಿಗೊಳಿಸುವಂತೆ ಒತ್ತಾಯಿಸಿ ರಾಜ್ಯದಾದ್ಯಂತ ಸುಮಾರು ಮೂರು ಲಕ್ಷ ಮಂದಿ ಸರ್ಕಾರಿ ನೌಕರರು ಪ್ರತಿಭಟನೆ ನಡೆಸುತ್ತಿದ್ದು, ನಿವೃತ್ತಿ ಬಳಿಕ ನೌಕರರು ನೆಮ್ಮದಿಯ ಹಾಗೂ ಗೌರವಯುತ ಜೀವನ ನಡೆಸಲು ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಬರುವುದು ಅಗತ್ಯ ಎಂಬ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ ಎಂದು ಆಯನೂರು ಮಂಜುನಾಥ್ ತಿಳಿಸಿದ್ದಾರೆ.