ದಾವಣಗೆರೆ: ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ 7ನೇ ವೇತನ ಆಯೋಗದ ವರದಿ ಪಡೆದು ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಲಾಗುವುದು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಡಾ.ವೈ.ಎ. ನಾರಾಯಣಸ್ವಾಮಿ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯ ಪ್ರೌಢಶಾಲೆ ಸಹ ಶಿಕ್ಷಕರ ಸಂಘದ ಜಿಲ್ಲಾ ಪದಾಧಿಕಾರಿಗಳ ಸೇವಾ ಸ್ವೀಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.
ಬಿಜೆಪಿ ಸರ್ಕಾರ ಶಿಕ್ಷಕರ ಪರವಾಗಿದ್ದು, ಐದು ಮತ್ತು ಆರನೇ ವೇತನ ಆಯೋಗಗಳನ್ನು ಬಿಜೆಪಿ ಸರ್ಕಾರ ಜಾರಿ ಮಾಡಿತ್ತು. ಈಗಲೂ ನಮ್ಮ ಸರ್ಕಾರ ಇದ್ದು, ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಶೀಘ್ರವೇ ಸಿಗಲಿದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ 7ನೇ ವೇತನ ಆಯೋಗ ವರದಿ ಪಡೆದು ಬಜೆಟ್ ನಲ್ಲಿ ಘೋಷಣೆ ಮಾಡುವಂತೆ ಮನವಿ ಮಾಡುತ್ತೇವೆ. ವೇತನ, ಭತ್ಯೆ ಹೆಚ್ಚಳದಿಂದ ರಾಜ್ಯದ ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.