ಶಿವಮೊಗ್ಗ: ಶಿವಮೊಗ್ಗದಲ್ಲಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೆಸರಿಡಲಾಗುವುದು ಎಂದು ಹೇಳಲಾಗಿತ್ತು. ಆದರೆ ಇದೀಗ ಸ್ವತಃ ಯಡಿಯೂರಪ್ಪನವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಶಿವಮೊಗ್ಗ ಏರ್ ಪೋರ್ಟ್ ಗೆ ರಾಷ್ಟ್ರಕವಿ ಕುವೆಂಪು ಹೆಸರಿಡಲಾಗುವುದು ಎಂದು ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರಿಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪನೆ ಸಲ್ಲಿಸಲಾಗುವುದು ಎಂದರು.
ಫೆಬ್ರವರಿ 27ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಅಂದು ದೇಶದ ಶ್ರೇಷ್ಠ ಕವಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪು ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಲು ನಿರ್ಧರಿಸಲಾಗಿದೆ. ನಾಳೆ ನಡೆಯಲಿರುವ ಅಧಿವೇಶನದಲ್ಲಿಯೂ ಈ ಬಗ್ಗೆ ಪ್ರಸ್ತಾಪಿಸಲಾಗುವುದು. ಅಲ್ಲಿ ನಿರ್ಣಯ ಕೈಗೊಂಡು ಬಳಿಕ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಪ್ರಧಾನಿ ಮೋದಿಯವರೇ ಕುವೆಂಪು ಹೆಸರು ಘೋಷಿಸಲಿ ಎಂಬುದು ನನ್ನ ಅಪೇಕ್ಷೆ ಎಂದು ಹೇಳಿದರು.