ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಕ್ಷೇತ್ರ ಮರು ವಿಂಗಡಣೆ ಅಧಿಸೂಚನೆ ಜಾರಿ ಮಾಡಿರುವುದಾಗಿ ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರದ ಪರ ವಕೀಲರು ಅನುಪಾಲನಾ ವರದಿ ಸಲ್ಲಿಸಿದ್ದು, ಮಾರ್ಚ್ 1ರ ಬುಧವಾರ ಜಿಪಂ ಮತ್ತು ತಾಪಂ ಕ್ಷೇತ್ರಗಳ ಮರು ವಿಂಗಡಣೆಗೆ ಸಂಬಂಧಿಸಿದಂತೆ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಹೈಕೋರ್ಟ್ ಆದೇಶದಂತೆ ಜಿಲ್ಲಾ, ತಾಲೂಕು ಪಂಚಾಯಿತಿ ಕ್ಷೇತ್ರಗಳ ಮರುವಿಂಗಡಣೆಗೆ ಸಂಬಂಧಿಸಿದಂತೆ ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಅದನ್ನು ಮುಖ್ಯಮಂತ್ರಿಗಳು ಒಪ್ಪಿದ್ದಾರೆ. ಅಂತೆಯೇ ಮಾರ್ಚ್ 1ರಂದು ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸರ್ಕಾರಿ ವಕೀಲರು ತಿಳಿಸಿದ್ದು, ಗೆಜೆಟ್ ಅಧಿಸೂಚನೆ ಪ್ರತಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದ್ದಾರೆ.
ಚುನಾವಣೆ ವಿಳಂಬ ಮಾಡುತ್ತಿರುವುದಕ್ಕೆ ಹೈಕೋರ್ಟ್ ವಿಧಿಸಿದ್ದ 5 ಲಕ್ಷ ರೂ. ದಂಡ ಪಾವತಿಸಲಾಗಿದೆ. ಕೋರ್ಟ್ ನಿರ್ದೇಶನದಂತೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಬೆಂಗಳೂರು ವಕೀಲರ ಸಂಘಕ್ಕೆ ತಲಾ ಎರಡು ಲಕ್ಷ ರೂಪಾಯಿ, ರಾಜ್ಯ ವಕೀಲರ ಗುಮಾಸ್ತರ ಕ್ಷೇಮಾಭಿವೃದ್ಧಿ ಸಂಘಕ್ಕೆ ಒಂದು ಲಕ್ಷ ರೂಪಾಯಿ ಪಾವತಿಸಲಾಗಿದೆ ಎಂದು ಹೇಳಲಾಗಿದೆ.