ತುಮಕೂರು: ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ತಲೆದಂಡ ಆಗಿದೆ.
ಫೆಬ್ರವರಿ 21 ರಂದು ಇಂಗ್ಲಿಷ್ ವಿಷಯದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಹೀಗಾಗಿ ಇಂಗ್ಲೀಷ್ ಪರೀಕ್ಷೆಯನ್ನು ಮಾರ್ಚ್ 6 ಕ್ಕೆ ಮುಂದೂಡಲಾಗಿತ್ತು. ಫೆಬ್ರವರಿ 22 ರಂದು ನಡೆಯಬೇಕಿದ್ದ ಬೌತಶಾಸ್ತ್ರ ಪ್ರಶ್ನೆ ಪತ್ರಿಕೆ ಕೂಡ ಜಾಲತಾಣದಲ್ಲಿ ಹರಿದಾಡಿದ್ದು ಈ ಬಗ್ಗೆ ಪಿಯು ಶಿಕ್ಷಣ ಇಲಾಖೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ಅವರ ತವರು ಜಿಲ್ಲೆಯಲ್ಲಿಯೇ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪದವಿ ಪೂರ್ವ ಶಿಕ್ಷಣ ಇಲಾಖೆ ಕ್ರಮಕೈಗೊಂಡು ಉಪ ನಿರ್ದೇಶಕ ಗಂಗಾಧರ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಪ್ರಶ್ನೆ ಪತ್ರಿಕೆ ಮುದ್ರಣಕ್ಕಾಗಿ ಟೆಂಡರ್ ಆಗಿದ್ದ ಮುದ್ರಣಾಲಯ ಬದಲಿಗೆ ಬೇರೆ ಮುದ್ರಣಾಲಯಕ್ಕೆ ಕಾರ್ಯಾದೇಶ ನೀಡಿರುವುದು ಸೋರಿಕೆಗೆ ಮೂಲ ಕಾರಣವೆನ್ನಲಾಗಿದ್ದು, ತನಿಖೆ ಕೈಗೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.