ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿಯನ್ನು ಏಪ್ರಿಲ್ 1 ರೊಳಗೆ ನಿಗದಿಗೊಳಿಸಿ ಅಧಿಸೂಚನೆ ಪ್ರಕಟಿಸಲಾಗುವುದು.
ರಾಜ್ಯ ಸರ್ಕಾರದಿಂದ ಹೈಕೋರ್ಟ್ ಗೆ ಈ ಬಗ್ಗೆ ಭರವಸೆ ನೀಡಲಾಗಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ಹಿಂಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮಸ್ವರಾಜ್ ಕಾಯ್ದೆಗೆ ತಿದ್ದುಪಡಿ ತಂದ ಸರ್ಕಾರದ ಕ್ರಮ ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ.
ಅರ್ಜಿ ವಿಚಾರಣೆ ಸಂದರ್ಭದಲ್ಲಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿಯನ್ನು ಏಪ್ರಿಲ್ 1 ರೊಳಗೆ ನಿಗದಿಗೊಳಿಸಿ ಅಧಿಸೂಚನೆ ಪ್ರಕಟಿಸುವುದಾಗಿ ಭರವಸೆ ನೀಡಿದ್ದು, ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಏಪ್ರಿಲ್ 12ಕ್ಕೆ ಮುಂದೂಡಿದೆ.