ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆ ಆರಂಭದ ದಿನವೇ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ಪೂರೈಸಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ.
ಕಳೆದ ವರ್ಷ ಸಕಾಲಕ್ಕೆ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ಪೂರೈಸದ ಕಾರಣ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆ ಆರಂಭದ ದಿನವೇ ಮಕ್ಕಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರ ನೀಡಲಾಗುವುದು.
1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ವಿತರಿಸಬೇಕಿರುವ ಪಠ್ಯಪುಸ್ತಕದಲ್ಲಿ ಶೇ. 60ಕ್ಕೂ ಅಧಿಕ ಪುಸ್ತಕಗಳ ಮುದ್ರಣ ಆಗಿದೆ. ಇದರಲ್ಲಿ ಶೇಕಡ 40 ಕ್ಕೂ ಅಧಿಕ ಪ್ರಮಾಣದ ಪುಸ್ತಕಗಳನ್ನು ಕ್ಷೇತ್ರ ಶಿಕ್ಷಣ ಅಧಿಕಾರಿಗಳ ವ್ಯಾಪ್ತಿಯ ಗೋದಾಮಗಳಲ್ಲಿ ದಾಸ್ತಾನು ಮಾಡಲಾಗಿದೆ.
ಉಳಿದ ಪುಸ್ತಕಗಳ ಮುದ್ರಣ ಮತ್ತು ಸರಬರಾಜು ಕಾರ್ಯ ಶೀಘ್ರವೇ ಪೂರ್ಣಗೊಳ್ಳಲಿದೆ. ಮಕ್ಕಳಿಗೆ ಮೊದಲ ಜೊತೆ ಸಮವಸ್ತ್ರ ನೀಡಲು ಟೆಂಡರ್ ಕರೆದು ಕಾರ್ಯಾದೇಶ ನೀಡಲಾಗಿದೆ. ಈ ತಿಂಗಳಾಂತ್ಯಕ್ಕೆ ಸಮವಸ್ತ್ರಗಳು ಸಿದ್ಧವಾಗಲಿದೆ. ಶಾಲೆ ಆರಂಭದ ದಿನವೇ ಮಕ್ಕಳಿಗೆ ಸಮವಸ್ತ್ರ ಮತ್ತು ಪಠ್ಯಪುಸ್ತಕ ನೀಡಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ.