ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳು ಹುರಿಯಾಳುಗಳನ್ನು ಅಖಾಡಕ್ಕಿಳಿಸಲು ಸಜ್ಜಾಗಿದ್ದು, ವಿಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧಗೊಂಡಿದೆ ಎಂದು ತಿಳಿದುಬಂದಿದೆ.
ಜೆಡಿಎಸ್ ಈಗಾಗಲೇ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಇದೀಗ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧಪಡಿಸಿದೆ.
ಮೊದಲ ಹಂತದಲ್ಲಿ 120 ಕ್ಷೇತ್ರಗಳ ಅಭ್ಯರ್ಥಿಗಳಿಗೆ ಟಿಕೆಟ್ ಅಂತಿಮಗೊಳಿಸಿದೆ. ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ರಣದೀಪ್ ಸುರ್ಜೇವಾಲಾ, ಎಂ.ಬಿ.ಪಾಟೀಲ್ ಸೇರಿದಂತೆ ಹಿರಿಯ ಮುಖಂಡರ ಸಮ್ಮುಖದಲ್ಲಿ ತಡ ರಾತ್ರಿವರೆಗೆ ನಡೆದ ಸಭೆಯಲ್ಲಿ ಮೊದಲ ಹಂತದ ಪಟ್ಟಿ ಸಿದ್ಧಪಡಿಸಿದ್ದಾರೆ.
ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಒಮ್ಮತದಿಂದ 120 ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ. ಈ ಪಟ್ಟಿಯನ್ನು ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಮೋಹನ್ ಪ್ರಕಾಶ್ ಹೈಕಮಾಂಡ್ ಗೆ ನೀಡಲಿದ್ದಾರೆ. ಇನ್ನುಳಿದ 104 ಸ್ಥಾನಗಳಿಗೆ ಎರಡರಿಂದ ಮೂರು ಹೆಸರು ಪ್ರಸ್ತಾಪವಾಗಿದ್ದು, ಈ ಬಗ್ಗೆ ಇಂದಿನ ಸಭೆಯಲ್ಲಿ ಮಹತ್ವದ ಚರ್ಚೆಗಳು ನಡೆಯಲಿವೆ.