ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಎಂಎಲ್ಸಿ ಪುಟ್ಟಣ್ಣ ಅವರಿಗೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಬಿಜೆಪಿ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಪುಟ್ಟಣ್ಣ ಕಾಂಗ್ರೆಸ್ ಸೇರಿದ್ದು, ಅವರ ಸೇರ್ಪಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.
ಕೆಪಿಸಿಸಿ ಕಚೇರಿ ಮುಂಭಾಗ ಟಿಕೆಟ್ ಆಕಾಂಕ್ಷಿಗಳು ಪ್ರತಿಭಟನೆ ನಡೆಸಿದ್ದಾರೆ. ರಾಜಾಜಿನಗರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳು ಧರಣಿ ನಡೆಸಿದ್ದು, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ. ಪುಟ್ಟಣ್ಣ ಅವರಿಗೆ ರಾಜಾಜಿನಗರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನೀಡದಂತೆ ಘೋಷಣೆ ಕೂಗಿದ್ದಾರೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಸಮ್ಮುಖದಲ್ಲಿ ಪುಟ್ಟಣ್ಣ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಪುಟ್ಟಣ್ಣ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪುಟ್ಟಣ್ಣ ಕಾಂಗ್ರೆಸ್ ಸೇರ್ಪಡೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಕೆಪಿಸಿಸಿ ಕಚೇರಿ ಮುಂಭಾಗ ರಾಜಾಜಿನಗರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಧರಣಿ ನಡೆಸಿದ್ದಾರೆ.