ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್, ಇನ್ನು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿಲ್ಲವಾದರೂ ಈ ಕುರಿತ ಸರಣಿ ಸಭೆಗಳು ನಡೆಯುತ್ತಿವೆ. ಇದರ ಮಧ್ಯೆ ಕೆಲವೊಂದು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ನಾಯಕರುಗಳು ಪರೋಕ್ಷವಾಗಿ ಹೆಸರು ಪ್ರಸ್ತಾಪಿಸುತ್ತಿದ್ದಾರೆ.
ಈ ಪೈಕಿ ದಾವಣಗೆರೆ ಜಿಲ್ಲೆ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಕೈ ಅಭ್ಯರ್ಥಿಯ ಆಯ್ಕೆ ಕುರಿತಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೆಸರು ಪ್ರಕಟಿಸಿದ್ದಾರೆ. ಶುಕ್ರವಾರದಂದು ಚನ್ನಗಿರಿ ಪಟ್ಟಣದಲ್ಲಿ ನಡೆದ ಪ್ರಜಾದ್ವನಿ ಯಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಈ ವಿಷಯ ತಿಳಿಸಿದ್ದಾರೆ.
ಈ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯನವರು, ಚನ್ನಗಿರಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹಲವರು ಆಕಾಂಕ್ಷಿಗಳಾಗಿದ್ದಾರೆ. ಆದರೆ ಈ ಕ್ಷೇತ್ರದಲ್ಲಿ ಭ್ರಷ್ಟ ರಾಜಕಾರಣಿಗೆ ಬುದ್ಧಿ ಕಲಿಸಬೇಕಾದರೆ ವಡ್ನಾಳ್ ರಾಜಣ್ಣ ಅವರಂತಹ ಸಜ್ಜನರು ಆಯ್ಕೆಯಾಗಬೇಕಿದೆ. ಹೀಗಾಗಿ ಅವರು ಸ್ಪರ್ಧೆ ಮಾಡುವುದಾದರೆ ಅವರಿಗೇ ಟಿಕೆಟ್ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.