ದಾವಣಗೆರೆ: ದೇಶಾದ್ಯಂತ ವಾರದಲ್ಲಿ ಐದು ದಿನ ಮಾತ್ರ ಕೆಲಸ, ಎರಡು ದಿನ ರಜೆ ನೀಡುವ ಬ್ಯಾಂಕಿಂಗ್ ವ್ಯವಸ್ಥೆ ಶೀಘ್ರವೇ ಜಾರಿಗೆ ಬರುವ ಸಾಧ್ಯತೆ ಇದೆ.
ಅಖಿಲ ಭಾರತ ಬ್ಯಾಂಕ್ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಿ.ಹೆಚ್. ವೆಂಕಟಾಚಲಂ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಕರ್ನಾಟಕ ಪ್ರದೇಶ ಬ್ಯಾಂಕ್ ಎಂಪ್ಲಾಯಿಸ್ ಫೆಡರೇಷನ್ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಮಹಿಳಾ ಬ್ಯಾಂಕ್ ಉದ್ಯೋಗಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಉದ್ಯೋಗಿಗಳ ಒತ್ತಾಯದಂತೆ ಐದು ದಿನ ಕೆಲಸದ ನೀತಿ ಜಾರಿಗೊಳಿಸಲು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದ್ದು, ಶೀಘ್ರವೇ ಅಂಕಿತ ಬೀಳುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಐದು ದಿನ ಕೆಲಸ ಮಾಡಿ ಎರಡು ದಿನ ರಜೆ ಪಡೆಯಬಹುದು. 7 ದಿನದ ವೇತನ ಪಡೆಯಬಹುದು ಎಂದುಕೊಂಡಿದ್ದೀರಿ. ಕಾಯಂ ಉದ್ಯೋಗಿಗಳ ಸಂಖ್ಯೆಯನ್ನು ಕಡಿತಗೊಳಿಸಲಾಗುತ್ತಿದೆ. ಹೆಚ್ಚಿನ ಹುದ್ದೆಗಳನ್ನು ಹೊರಗುತ್ತಿಗೆ ನೀಡಲು ಸಿದ್ಧತೆ ನಡೆದಿದೆ ಎಂದು ಹೇಳಿದ್ದಾರೆ.
ಪ್ರಸ್ತುತ ಬ್ಯಾಂಕುಗಳಲ್ಲಿ ಸಿಬ್ಬಂದಿ ಸಂಖ್ಯೆ ಕಡಿಮೆ ಇದ್ದು, ಒಬ್ಬರೇ ನಾಲ್ಕು ಜನರ ಕೆಲಸ ಮಾಡುತ್ತಿದ್ದಾರೆ. ಒತ್ತಡ ಕಡಿಮೆ ಮಾಡಲು ವಾರದಲ್ಲಿ ಐದು ದಿನ ಕೆಲಸ ಮಾಡುವ ವ್ಯವಸ್ಥೆ ಜಾರಿಗೆ ಒತ್ತಾಯಿಸಲಾಗಿದೆ. ಬೆಳಿಗ್ಗೆ 20 ನಿಮಿಷ ಮತ್ತು ಸಂಜೆ 20 ನಿಮಿಷ ಹೆಚ್ಚುವರಿ ಕೆಲಸ ಮಾಡಬೇಕಿದೆ. ದೇಶದಲ್ಲಿ 7 ಲಕ್ಷಕ್ಕೂ ಅಧಿಕ ಖಾಯಂ ಬ್ಯಾಂಕ್ ನೌಕರರು ಇದ್ದು, ಎರಡು ಲಕ್ಷಕ್ಕೂ ಅಧಿಕ ಬ್ಯಾಂಕ್ ಮಿತ್ರರು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ನೀಡುತ್ತಿದ್ದಾರೆ. ಬ್ಯಾಂಕ್ ಮಿತ್ರರ ಸಂಖ್ಯೆ ಹೆಚ್ಚಳದ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂಗಿತ ವ್ಯಕ್ತಪಡಿಸಿದ್ದಾರೆ. ಅವರಿಗೆ ಕಾಯಂ ಉದ್ಯೋಗಿಗಳ ಅಗತ್ಯವಿಲ್ಲ. ಕಾಯಂ ಹುದ್ದೆಗಳ ಕಡಿತಕ್ಕೆ ಸರ್ಕಾರ ಯತ್ನಿಸಿದೆ ಎಂದು ಹೇಳಿದ್ದಾರೆ.