ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ನಾಯಕರು ತೀರ್ಮಾನಿಸಿದ್ದು, ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ಮಾರ್ಚ್ 15, 16ರಂದು ದೆಹಲಿಯಲ್ಲಿ ನಡೆಯಲಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಿಇಸಿ ಸಭೆ ನಡೆಯಲಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಭಾಗವಹಿಸಲಿದ್ದಾರೆ.
ಸ್ಕ್ರೀನಿಂಗ್ ಕಮಿಟಿ ಈಗಾಗಲೇ ಅಂತಿಮಗೊಳಿಸಿರುವ 150 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವ ಬಗ್ಗೆ ಸಿಇಸಿ ಸಭೆಯಲ್ಲಿ ಚರ್ಚಿಸಿ ಅಂತಿಮ ಅನುಮೋದನೆ ನೀಡುವ ನಿರೀಕ್ಷೆ ಇದೆ. ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟವಾಗುವ ಮೊದಲೇ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ಉಳಿದ ಕ್ಷೇತ್ರಗಳಲ್ಲಿ ಟಿಕೆಟ್ ಹಂಚಿಕೆ ಗೊಂದಲ ಇರುವುದರಿಂದ ಸಮರ್ಥ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಮತ್ತೆ ಚರ್ಚಿಸಿ ತೀರ್ಮಾನಿಸಲಾಗುವುದು ಎನ್ನಲಾಗಿದೆ.