ತಾನು ಪ್ರೀತಿಸುತ್ತಿದ್ದ ಹುಡುಗಿ ಮತ್ತೊಬ್ಬನ ಜೊತೆ ಮದುವೆಯಾಗುತ್ತಿದ್ದಾಳೆ ಎಂಬ ಕಾರಣಕ್ಕೆ ಭಗ್ನ ಪ್ರೇಮಿಯೊಬ್ಬ ಆಕೆ ಮದುವೆ ನಡೆಯುತ್ತಿದ್ದ ಕಲ್ಯಾಣ ಮಂಟಪಕ್ಕೆ ಬಂದು ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.
ಬೆಂಗಳೂರು ನಿವಾಸಿ ನಿತೀಶ್ ಆತ್ಮಹತ್ಯೆಗೆತ್ನಿಸಿದವನಾಗಿದ್ದು, ಈತ ಪ್ರೀತಿಸುತ್ತಿದ್ದ ಹುಡುಗಿಯ ಮದುವೆ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯದ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಬುಧವಾರ ರಾತ್ರಿ ಸ್ಥಳಕ್ಕೆ ಬಂದ ಈತ ಯುವತಿ ಹಾಗೂ ಆಕೆಯ ಕುಟುಂಬಸ್ಥರ ಮೇಲೆ ಕೂಗಾಟ ನಡೆಸಿ ಗಲಾಟೆ ಮಾಡಿದ್ದಾನೆ. ಅಲ್ಲದೇ ಬ್ಲೇಡ್ ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು ಈತನನ್ನು ಈಗ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆ ನಡೆದ ನಂತರ ನಿಗದಿಯಾಗಿದ್ದ ಮದುವೆ ರದ್ದಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.