ಚಿತ್ರದುರ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿಯೇ ವಿಧಾನಸಭೆ ಚುನಾವಣೆ ಎದುರಿಸುವುದಾಗಿ ಬಿಜೆಪಿ ನಾಯಕರು ಘೋಷಿಸಿದ್ದಾರೆ. ಇದರ ನಡುವೆಯೇ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಂದಿನ ಮುಖ್ಯಮಂತ್ರಿ ವಿಚಾರವಾಗಿ ನೀಡಿರುವ ಹೇಳಿಕೆ ಕುತೂಹಲ ಮೂಡಿಸಿದೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ವಿಧಾನಸಭೆ ಚುನಾವಣೆ ಫಲಿತಾಂಶದ ನಂತರವೇ ಮುಂದಿನ ಮುಖ್ಯಮಂತ್ರಿ ಕುರಿತು ಪಕ್ಷ ನಿರ್ಧರಿಸಲಿದೆ ಎಂದು ಹೇಳಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಪಕ್ಷ ತೀರ್ಮಾನ ಮಾಡುತ್ತದೆ. ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದ್ದು, 140ಕ್ಕೂ ಅಧಿಕ ಸ್ಥಾನ ಗೆಲ್ಲುವ ವಿಶ್ವಾಸವಿದೆ. ಕೆಲವರು ನಾನೇ ಮುಖ್ಯಮಂತ್ರಿ ಎಂದು ಮಾತನಾಡುತ್ತಿದ್ದಾರೆ. ಇದಕ್ಕೆ ವಿಶೇಷ ಅರ್ಥವಿಲ್ಲ, ನಮ್ಮ ಪಕ್ಷ ಬಹುಮತದಿಂದ ಅಧಿಕಾರಕ್ಕೆ ಬರಲಿದೆ. ನಂತರ ಸಿಎಂ ಬಗ್ಗೆ ಪಕ್ಷ ನಿರ್ಧರಿಸಲಿದೆ ಎಂದು ಹೇಳಿದ್ದಾರೆ.