ಬಾಗಲಕೋಟೆ: ಯುವಕನೊಬ್ಬ ಪ್ರಿಯತಮೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲುಕಿನ ಗೂಡುರು ಗ್ರಾಮದಲ್ಲಿ ನಡೆದಿದೆ.
ನೇತ್ರಾವತಿ (21) ಎಂಬ ಯುವತಿ ಮೇಲೆ ಅಫ್ಜಲ್ ಎಂಬಾತ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಕೋಳಿಫಾರಂ ಗೆ ಕೆಲಸಕ್ಕೆ ಹೋಗುತ್ತಿದ್ದ ಯುವತಿಯನ್ನು ಎಳೆದುತಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಬಳಿಕ ತಾನು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ನೇತ್ರಾವತಿಗೆ ಬೇರೆ ಯುವಕನ ಜೊತೆ ನಿಶ್ಚಿತಾರ್ಥವಾಗಿತ್ತು. ಈ ಹಿನ್ನೆಲೆಯಲ್ಲಿ ಆಕೆಯನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಳ್ಳಲು ಅಫ್ಜಲ್ ಯತ್ನಿಸಿದ್ದಾನೆ. ಇಬ್ಬರನ್ನು ರಕ್ಷಿಸಿರುವ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳು ನೇತ್ರಾವತಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶೇ.70ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿರುವ ಅಫ್ಜಲ್ ನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನಾಸ್ಥಳಕ್ಕೆ ಅಮೀನಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.