ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಈಗಾಗಲೇ 124 ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದ ಕಾಂಗ್ರೆಸ್ ಪಕ್ಷ ಇಂದು 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ನಿರೀಕ್ಷೆಯಂತೆ ತೀರ್ಥಹಳ್ಳಿ ಕ್ಷೇತ್ರದ ಟಿಕೆಟ್ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ನೀಡಲಾಗಿದ್ದು, ಇದೇ ಕ್ಷೇತ್ರದ ಮತ್ತೊಬ್ಬ ಆಕಾಂಕ್ಷಿ ಮಂಜುನಾಥಗೌಡ ಅವರಿಗೆ ವಿಧಾನ ಪರಿಷತ್ ಸದಸ್ಯರನ್ನಾಗಿಸುವ ಭರವಸೆ ನೀಡಲಾಗಿದೆ.
ಇನ್ನುಳಿದಂತೆ ಇತ್ತೀಚೆಗಷ್ಟೇ ಪಕ್ಷ ಸೇರ್ಪಡೆಗೊಂಡಿದ್ದ ಎಸ್.ಆರ್. ಶ್ರೀನಿವಾಸ್ ಅವರಿಗೆ ಗುಬ್ಬಿ ಕ್ಷೇತ್ರದ ಟಿಕೆಟ್ ನೀಡಲಾಗಿದ್ದು, ಮೇಲುಕೋಟೆ ಕ್ಷೇತ್ರದಲ್ಲಿ ಸರ್ವೋದಯ ಕರ್ನಾಟಕ ಪಾರ್ಟಿಯಿಂದ ಸ್ಪರ್ಧಿಸಲಿರುವ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಬೆಂಬಲಿಸಲಾಗಿದೆ.
ಅಲ್ಲದೆ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಬಾಬುರಾವ್ ಚಿಂಚನಸೂರ್ ಅವರಿಗೆ ಗುರುಮಿಟ್ಕಲ್ ಕ್ಷೇತ್ರದ ಟಿಕೆಟ್ ನೀಡಲಾಗಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷ ಸೇರ್ಪಡೆಗೊಂಡಿದ್ದ ಎನ್.ವೈ. ಗೋಪಾಲಕೃಷ್ಣ ಅವರಿಗೆ ಮೊಳಕಾಲ್ಮೂರು ಕ್ಷೇತ್ರದ ಅಭ್ಯರ್ಥಿಯನ್ನಾಗಿಸಲಾಗಿದೆ.
ಕಾಂಗ್ರೆಸ್ ಟಿಕೆಟ್ ಗಾಗಿ ಪ್ರಬಲ ಪೈಪೋಟಿ ಇದ್ದ ಕಲಘಟಗಿ ಕ್ಷೇತ್ರದಲ್ಲಿ ಸಂತೋಷ್ ಲಾಡ್ ಅವಕಾಶ ಗಿಟ್ಟಿಸಿಕೊಂಡಿದ್ದು, ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಕ್ಷೇತ್ರದ ಟಿಕೆಟ್ ನೀಡಲಾಗಿದೆ.
ಇನ್ನು ಚಿತ್ರದುರ್ಗ ಕ್ಷೇತ್ರದಿಂದ ಕೆ.ಸಿ. ವೀರೇಂದ್ರ ಅವಕಾಶ ಪಡೆದುಕೊಂಡಿದ್ದು, ಚನ್ನಗಿರಿ ಕ್ಷೇತ್ರದಲ್ಲಿ ಬಸವರಾಜು ವಿ. ಶಿವಗಂಗಾ ಸ್ಪರ್ಧೆಗಿಳಿಯಲಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯನವರಿಗಾಗಿ ಕ್ಷೇತ್ರ ಬಿಟ್ಟು ಕೊಟ್ಟಿದ್ದ ಬಿ.ಬಿ. ಚಿಮ್ಮನಕಟ್ಟಿ ಅವರಿಗೆ ಬಾದಾಮಿಯಿಂದ ಸ್ಪರ್ಧಿಸಲು ಅವಕಾಶ ನೀಡಲಾಗಿದೆ.
ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ವೈಎಸ್ ವಿ ದತ್ತ ಅವರಿಗೆ ಕಡೂರು ಕ್ಷೇತ್ರದಲ್ಲಿ ಅವಕಾಶ ನೀಡಬಹುದು ಎಂದು ಹೇಳಲಾಗಿದ್ದರೂ ಅಲ್ಲಿಂದ ಆನಂದ್ ಕೆ.ಎಸ್. ಅಭ್ಯರ್ಥಿಯಾಗಲಿದ್ದಾರೆ.