alex Certify BIG NEWS: ರಾಜ್ಯದಲ್ಲಿ ಕಟ್ಟಿ ಬೆಳೆಸಿದ್ದ ಬ್ಯಾಂಕ್ ಗಳನ್ನು ತಿಂದು ಮುಕ್ಕಿದ್ದಾಯ್ತು; ಈಗ ರೈತರ ಪಾಲಿನಿ ಸಂಜೀವಿನಿ ನಂದಿನಿಯನ್ನು ಆಪೋಶನ ತೆಗೆದುಕೊಳ್ತಿದ್ದಾರೆ; ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಸಿದ್ದರಾಮಯ್ಯ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಕಟ್ಟಿ ಬೆಳೆಸಿದ್ದ ಬ್ಯಾಂಕ್ ಗಳನ್ನು ತಿಂದು ಮುಕ್ಕಿದ್ದಾಯ್ತು; ಈಗ ರೈತರ ಪಾಲಿನಿ ಸಂಜೀವಿನಿ ನಂದಿನಿಯನ್ನು ಆಪೋಶನ ತೆಗೆದುಕೊಳ್ತಿದ್ದಾರೆ; ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಸಂಚು ಹೂಡಿದ್ದಾರೆ ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮಾರುಕಟ್ಟೆಗೆ ಅಮುಲ್ ಎಂಟ್ರಿಕೊಟ್ಟಿರುವ ಹಿನೆಲೆಯಲ್ಲಿ ಕಿಡಿಕಾರಿರುವ ಸಿದ್ದರಾಮಯ್ಯ, ಕನ್ನಡಿಗರೇ ಎಚ್ಚರ…!! ಎಂದು ಸಂದೇಶ ರವಾನಿಸಿದ್ದಾರೆ.

ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳ ವಿಲೀನದ ಬಗ್ಗೆ ಕೇಂದ್ರ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಪ್ರಸ್ತಾಪ ಮಾಡಿದ ದಿನದಿಂದ ರಾಜ್ಯದ ಹೈನು ಉದ್ಯಮಕ್ಕೆ ಗರ ಬಡಿದಿದೆ. ವಿಲೀನದ ಪ್ರಸ್ತಾವಕ್ಕೆ ಕನ್ನಡಿಗರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಹಿಂಬಾಗಿಲಿನಿಂದ ಅಮುಲ್ ಪ್ರವೇಶಿಸುತ್ತಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆಯಲ್ಲಿ ಮಾಯವಾಗುತ್ತಿದೆ. ಇದೇ ವೇಳೆ ಅಮುಲ್ ಉತ್ಪನ್ನಗಳ ಮಾರಾಟ ಭರದಿಂದ ಪ್ರಾರಂಭವಾಗಿದೆ. ಸಚಿವ ಅಮಿತ್ ಶಾ ನೇರ ಉಸ್ತುವಾರಿಯಲ್ಲಿಯೇ ಇವೆಲ್ಲ ನಡೆಯುತ್ತಿದೆ ಎನ್ನುವುದು ನಿಸ್ಸಂಶಯ ಎಂದು ವಾಗ್ದಾಳಿ ನಡೆಸಿದ್ದಾರೆ.

ಗುಜರಾತ್ ಮೂಲದ ಅಮುಲ್ ಹಾಲು ಮತ್ತು ಮೊಸರು ಮಾರಾಟದ ಮೂಲಕ ಕರ್ನಾಟಕದ ಮಾರುಕಟ್ಟೆ ಪ್ರವೇಶಿಸಲು ಹಿಂದೆಯೂ ಪ್ರಯತ್ನಿಸಿತ್ತು. ಅದಕ್ಕೆ ನಾವು ಅವಕಾಶ ಕೊಡಲಿಲ್ಲ. ಈಗ ಬಿಜೆಪಿ ಸರ್ಕಾರ ಕೆಂಪುಕಂಬಳಿ ಹಾಸಿ ಸ್ವಾಗತಿಸಿದೆ. ಬಿಜೆಪಿ ಆಡಳಿತಾವಧಿಯಲ್ಲಿ ಕೆಎಂಎಫ್ ನಲ್ಲಿ ಹಾಲಿನ ಸಂಗ್ರಹ ಕಡಿಮೆಯಾಗುತ್ತಿದೆ. ದಿನಕ್ಕೆ 99 ಲಕ್ಷ ಲೀಟರ್ ಹಾಲು ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇದು ಕೆಎಂಎಫ್ ವಿರುದ್ಧದ ಷಡ್ಯಂತ್ರವೇ? ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರ ಹಾಲಿಗೆ ನೀಡುವ ಸಹಾಯಧನವನ್ನು ಲೀಟರಿಗೆ 5 ರೂ.ಗಳಷ್ಟು ಹೆಚ್ಚಿಸಿದ್ದೆವು. ಇದರಿಂದಾಗಿ 2012-13 ರಲ್ಲಿ 45 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣವು 2017 ರ ವೇಳೆಗೆ 73 ಲಕ್ಷ ಲೀಟರಿಗೆ ಏರಿಕೆಯಾಗಿತ್ತು. ಈಗ ಕಡಿಮೆಯಾಗುತ್ತ ಸಾಗಲು ಕಾರಣ ಏನು ಎಂದು ಕೇಳಿದ್ದಾರೆ.

ಕರ್ನಾಟಕದ ಬಿಜೆಪಿ ನಾಯಕತ್ವ ಎಷ್ಟೊಂದು ದುರ್ಬಲವಾಗಿದೆಯೆಂದರೆ ಒಂದೆಡೆ ಬೆಳಗಾವಿ ಗಡಿಪ್ರದೇಶದಲ್ಲಿ ಮಹಾರಾಷ್ಟ್ರ ಸರ್ಕಾರ ನೇರವಾಗಿ ತನ್ನ ಆಡಳಿತವನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದೆ. ಇನ್ನೊಂದೆಡೆ ಗುಜರಾತ್ ರಾಜ್ಯ ಅಮುಲ್ ಮೂಲಕ ಇಲ್ಲಿನ ರೈತರನ್ನು ಬೀದಿಗೆ ತಳ್ಳುವ ಪ್ರಯತ್ನ ಮಾಡುತ್ತಿದೆ. ಹಿಂದಿ ಹೇರಿಕೆಯ ಮೂಲಕ ನಡೆಸುತ್ತಿರುವ ಭಾಷಾದ್ರೋಹ ಮತ್ತು ರಾಜ್ಯದ ಗಡಿಯೊಳಗೆ ಅತಿಕ್ರಮಿಸುವ ಮೂಲಕ ನಡೆಸುತ್ತಿರುವ ನೆಲದ್ರೋಹದ ಜೊತೆಗೆ ಈಗ ಕೆಎಂಎಫ್ ಅನ್ನು ಮುಚ್ಚಿಸುವ ಮೂಲಕ ರೈತದ್ರೋಹ ಮಾಡಲು ಬಿಜೆಪಿ ಸರ್ಕಾರ ಹೊರಟಿದೆ.

ನಾಡಿನ ರೈತರು, ರೈತರ ಹಿತರಕ್ಷಣೆಗಾಗಿ ಕಟ್ಟಿರುವ ಕೆಎಂಎಫ್ ನ ಕಬಳಿಕೆಯ ವಿರುದ್ಧ ಕನ್ನಡಿಗರೆಲ್ಲರೂ ಒಮ್ಮತದಿಂದ ವಿರೋಧಿಸಬೇಕಾಗುತ್ತದೆ. ಅಮುಲ್ ಉತ್ಪನ್ನಗಳನ್ನು ಖರೀದಿಸವುದಿಲ್ಲ ಎಂದು ಕನ್ನಡಿಗರೆಲ್ಲರೂ ಪ್ರತಿಜ್ಞೆ ಮಾಡಬೇಕು ಎಂದು ಕರೆ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...