ಮಹತ್ವದ ಬೆಳವಣಿಗೆಯೊಂದರಲ್ಲಿ ನಂಜನಗೂಡು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ದರ್ಶನ್ ಧ್ರುವನಾರಾಯಣ್ ಅವರ ಎದುರು ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಈ ಕುರಿತಂತೆ ಶಾಸಕ ಜಿ.ಟಿ. ದೇವೇಗೌಡ ಸುಳಿವು ನೀಡಿದ್ದು, ಮೈಸೂರಿನಲ್ಲಿ ಮಾತನಾಡಿದ ಅವರು, ಇತ್ತೀಚೆಗಷ್ಟೇ ತಮ್ಮ ತಂದೆ ಧ್ರುವನಾರಾಯಣ್ ಅವರನ್ನು ಕಳೆದುಕೊಂಡಿದ್ದ ದರ್ಶನ್ ಹಾಗೂ ಅವರ ಸಹೋದರ ಈಗ ತಾಯಿಯನ್ನೂ ಕಳೆದುಕೊಂಡು ಅನಾಥರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ನಂಜನಗೂಡಿನಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಬೇಡ ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದರು.
ಹೀಗಾಗಿ ಜೆಡಿಎಸ್ ವರಿಷ್ಠರೊಂದಿಗೆ ಚರ್ಚೆ ನಡೆಸಿದ ಬಳಿಕ ಈ ಕುರಿತಂತೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಶಾಸಕ ಜಿ.ಟಿ. ದೇವೇಗೌಡರು ಹೇಳಿದ್ದು, ನಂಜನಗೂಡಿನಲ್ಲಿ ಬಹುತೇಕ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯುವ ಸಾಧ್ಯತೆ ಇಲ್ಲವೆಂದು ಹೇಳಲಾಗುತ್ತಿದೆ. ಅಂತಹ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ನಡೆಯಲಿದೆ.