ನವದೆಹಲಿ: ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಏಪ್ರಿಲ್ 18 ರಿಂದ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಈ ಪೀಠವು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿ.ಎಸ್.ನರಸಿಂಹ ಅವರನ್ನು ಒಳಗೊಂಡಿರುತ್ತದೆ. ಮಾರ್ಚ್ 13 ರಂದು, ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಮತ್ತು ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಅರ್ಜಿಗಳನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸಿತು.
ಮಾರ್ಚ್ ನಲ್ಲಿ ಭಾರತ ಸರ್ಕಾರವು ಅರ್ಜಿಗಳನ್ನು ವಿರೋಧಿಸಿ ತನ್ನ ಪ್ರತಿ-ಅಫಿಡವಿಟ್ ಅನ್ನು ಸಲ್ಲಿಸಿತು. ಇದು ಶಾಸಕಾಂಗ ತೀರ್ಮಾನಕ್ಕೆ ಬಿಟ್ಟ ವಿಚಾರ. ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡುವುದನ್ನು ವಿರೋಧಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ. ಕೇಂದ್ರವು ತನ್ನ ಅಫಿಡವಿಟ್‌ನಲ್ಲಿ, ಸಲಿಂಗ ಸಂಬಂಧಗಳು ಮತ್ತು ಭಿನ್ನಲಿಂಗೀಯ ಸಂಬಂಧಗಳು ಸ್ಪಷ್ಟವಾಗಿ ವಿಭಿನ್ನ ವರ್ಗಗಳಾಗಿದ್ದು, ಅವುಗಳನ್ನು ಒಂದೇ ರೀತಿ ಪರಿಗಣಿಸಲಾಗುವುದಿಲ್ಲ ಎಂದು ಹೇಳಲಾಗಿದೆ.