ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಜೊತೆಗೆ ಬಿಜೆಪಿಗೂ ಗುಡ್ ಬೈ ಹೇಳಲಿದ್ದಾರೆ. ರಾಜೀನಾಮೆ ನೀಡುವ ಸಲುವಾಗಿ ಅವರು ಶಿರಸಿಗೆ ತೆರಳುತ್ತಿದ್ದು, ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ.
ಇದಕ್ಕೂ ಮುನ್ನ ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಜಗದೀಶ್ ಶೆಟ್ಟರ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದು, ಈ ವೇಳೆ ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ತುಳಿಯುವ ಕಾರ್ಯ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಆಗ ನಿಮ್ಮ ನಿವಾಸದ ಮೇಲೆ ಐಟಿ – ಇಡಿ ದಾಳಿ ನಡೆಯುವ ಭೀತಿ ಇದೆಯಾ ಎಂಬ ಪತ್ರಕರ್ತರ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.
ನಾನು ಕಾನೂನು ಮೀರಿ ಯಾವುದನ್ನೂ ಮಾಡಿಲ್ಲ. ಎಲ್ಲವೂ ಕಾನೂನು ಬದ್ಧವಾಗಿದ್ದು, ಹೀಗಾಗಿಯೇ ಯಾವುದೇ ಹೆದರಿಕೆ ಇಲ್ಲದೆ ಸೂಕ್ತ ನಿರ್ಧಾರ ಕೈಗೊಳ್ಳುತ್ತಿದ್ದೇನೆ ಎಂದಿದ್ದಾರೆ.
ಜೊತೆಗೆ ಎಲ್ಲ ಸಮುದಾಯದವರನ್ನು ಸಮಾನವಾಗಿ ಕಂಡಿದ್ದೇನೆ ಎಂದು ಹೇಳಿದ ಅವರು, ಕಾಂಗ್ರೆಸ್ ನಾಯಕರು ಈವರೆಗೆ ನನ್ನನ್ನು ಸಂಪರ್ಕಿಸಿಲ್ಲ. ಆದರೆ ಆ ನಾಯಕರ ಜೊತೆ ಗುರುತಿಸಿಕೊಂಡವರು ಸಂಪರ್ಕದಲ್ಲಿದ್ದಾರೆ ಎಂದು ಹೇಳಿದರು.