ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಾಫಿಯಾ ಡಾನ್ ಅತೀಕ್ ಅಹ್ಮದ್ ಮತ್ತು ಆತನ ಸಹೋದರನನ್ನು ಕೊಂದ ಆರೋಪದ ಮೇಲೆ ಬಂಧಿತರಾಗಿರುವ ಮೂವರು ಆರೋಪಿಗಳು ತಾವು ಫೇಮಸ್ ಆಗಲು ಕೃತ್ಯ ಎಸಗಿದ್ದಾಗಿ ಹೇಳಿದ್ದಾರೆ.
ಶನಿವಾರ ರಾತ್ರಿ ಮಾಧ್ಯಮ ಸಂವಾದದ ವೇಳೆ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರನ್ನು ಮೂವರು ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ.
ವೈದ್ಯಕೀಯ ತಪಾಸಣೆಗಾಗಿ ಪ್ರಯಾಗರಾಜ್‌ನಲ್ಲಿರುವ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯುತ್ತಿದ್ದಾಗ ಅತೀಕ್ ಮತ್ತು ಅವರ ಸಹೋದರನನ್ನು ದಾಳಿಕೋರರು ಮಾಧ್ಯಮ ಪತ್ರಕರ್ತರಂತೆ ನಟಿಸಿ ಗುಂಡಿಕ್ಕಿ ಕೊಂದರು. ಪೊಲೀಸ್ ಸಿಬ್ಬಂದಿಯ ಸಮ್ಮುಖದಲ್ಲಿಯೇ ಅವರನ್ನು ಹತ್ಯೆ ಮಾಡಿದ್ದು ದೊಡ್ಡ ಸಂಚಲನ ಸೃಷ್ಟಿಸಿದೆ.
ಲವ್ಲೇಶ್ ತಿವಾರಿ, ಅರುಣ್ ಮೌರ್ಯ ಮತ್ತು ಸನ್ನಿ ಎಂದು ಗುರುತಿಸಲಾದ ಹಂತಕರು ವಿಚಾರಣೆಯ ವೇಳೆ ಪೊಲೀಸರಿಗೆ ಹೇಳಿಕೆ ನೀಡಿದ್ದು, ತಾವು ಫೇಮಸ್ ಆಗಲು ಮಾಜಿ ಸಂಸದರನ್ನು ಕೊಂದಿರುವುದಾಗಿ ತಿಳಿಸಿದ್ದಾರೆ.
ಏತನ್ಮಧ್ಯೆ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತನಿಖೆಗಾಗಿ ಮೂವರು ಸದಸ್ಯರ ನ್ಯಾಯಾಂಗ ಆಯೋಗವನ್ನು ರಚಿಸುವಂತೆ ಸೂಚಿಸಿದ್ದಾರೆ. ರಾಜ್ಯದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರ ವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.