ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಗುಡುಗು, ಆಲಿಕಲ್ಲು ಸಹಿತ ಮಳೆಯಾಗಿದೆ. ವಿಜಯನಗರ ಜಿಲ್ಲೆ ಹೂವಿನ ಹಡಗಲಿಯಲ್ಲಿ 50 ಹೆಕ್ಟರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದ್ದು, 9 ಮನೆಗಳಿಗೆ ಹಾನಿಯಾಗಿದೆ.
ಬಾಗೇಪಲ್ಲಿ, ಬೆಂಗಳೂರು ನಗರ, ಹೊಸಪೇಟೆ, ಶಿವಮೊಗ್ಗ, ದೇವರಹಿಪ್ಪರಗಿ ಮೊದಲಾದ ಕಡೆಗಳಲ್ಲಿ ಮಳೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ಸಿಡಿಲು ಬಡಿದು ಎರಡು ಎತ್ತು, ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಕೊಪ್ಪಲು ಬಾರೆಯಲ್ಲಿ ಸಿಡಿಲು ಬಡಿದು 8 ಕುರಿ ಮೃತಪಟ್ಟಿವೆ.
ಇನ್ನು ಎರಡು ದಿನ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಮೈಸೂರು, ವಿಜಯನಗರ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವ ಇದೆ.
ಉತ್ತರ ಒಳನಾಡಿನ ಬೆಳಗಾವಿ, ಗದಗ, ಕಲಬುರ್ಗಿ, ಬೀದರ್, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವ ಇದೆ. ಕರಾವಳಿಯ ಕೆಲವು ಪ್ರದೇಶದಲ್ಲಿ ಸಾಮಾನ್ಯಕ್ಕಿಂತ ಎರಡು ಡಿಗ್ರಿ ಸೆಲ್ಸಿಯಸ್ ನಷ್ಟು ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.