ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದಲ್ಲಿ ಬಿಜೆಪಿ -ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಯಶವಂತಪುರ ಠಾಣೆ ಮುಂಭಾಗ ಬಿಗುವಿನ ವಾತಾವರಣ ಉಂಟಾಗಿದೆ.
ಈ ಹಿನ್ನೆಲೆಯಲ್ಲಿ ಕೆಎಸ್ಆರ್ಪಿ ತುಕಡಿ ನಿಯೋಜಿಸಲಾಗಿದೆ. ಪ್ರಚಾರದ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಗಲಾಟೆ ವೇಳೆ ಪೊಲೀಸರು ಬಿಜೆಪಿ ಪರ ಬೆಂಬಲಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.
ಗಲಾಟೆ ವೇಳೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದ್ದು, ಈ ವೇಳೆ ಪೊಲೀಸರ ಜೊತೆ ಸೇರಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಅಲ್ಲದೇ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರನ್ನು ಪೊಲೀಸರು ತಳ್ಳಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ನ್ಯಾಯ ಬೇಕೆಂದು ಯಶವಂತಪುರ ಠಾಣೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.