ರಾಜ್ಯ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಇತ್ತೀಚೆಗೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸಿದರೆ ಅಂತಹ ಸಂದರ್ಭದಲ್ಲಿ ಬಜರಂಗದಳ, ಪಿಎಫ್ಐ ಮೊದಲಾದ ಸಂಘಟನೆಗಳನ್ನು ನಿಷೇಧಿಸುವುದಾಗಿ ಹೇಳಿಕೊಂಡಿತ್ತು.
ಕಾಂಗ್ರೆಸ್ ಈ ಪ್ರಸ್ತಾವನೆಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರುಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಈ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಇದಕ್ಕೆ ಕೆಪಿಸಿಸಿ ಅಧ್ಯಕ್ಷರು ಮಾಹಿತಿ ನೀಡಲಿದ್ದಾರೆ ಎಂದು ಹೇಳಿದ್ದರು.
ಬಜರಂಗದಳ ಪ್ರಸ್ತಾವನೆ ವಿಚಾರ ಕಾಂಗ್ರೆಸ್ಸಿಗೆ ಕೊಂಚ ಹಿನ್ನಡೆಯನ್ನುಂಟು ಮಾಡುತ್ತದೆ ಎಂಬ ಮಾತುಗಳ ಮಧ್ಯೆ ಇದೀಗ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ವಿಶ್ವ ಹಿಂದೂ ಪರಿಷತ್, ಚಂಡೀಗಡ ಘಟಕ, ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ತನ್ನ ಅಂಗ ಸಂಸ್ಥೆ ಬಜರಂಗದಳಕ್ಕೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ 100 ಕೋಟಿ ರೂ. ಮಾನಹಾನಿ ಪರಿಹಾರ ನೀಡುವಂತೆ ಮಲ್ಲಿಕಾರ್ಜುನ ಖರ್ಗೆಯವರಿಗೆ ನೋಟಿಸ್ ಜಾರಿ ಮಾಡಿದೆ.