ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸೈಯದ್ ಜಾಕೀರ್, ಕೊನೆ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದಿದ್ದರು. ಅಷ್ಟೇ ಅಲ್ಲ, ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಅವರನ್ನು ಬೆಂಬಲಿಸುವುದಾಗಿ ಸೈಯದ್ ಜಾಕೀರ್ ಘೋಷಿಸಿದ್ದರು.
ತಾವು ಸ್ಪರ್ಧೆಯಿಂದ ಹಿಂದೆ ಸರಿಯಲು ಅನಾರೋಗ್ಯ ಕಾರಣ ಎಂದು ಜೆಡಿಎಸ್ ನಾಯಕರಿಗೆ ಅವರು ತಿಳಿಸಿದ್ದು, ಆದರೆ ಬಳಿಕ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿದ್ದ ಕಾರಣಕ್ಕೆ ಇದೀಗ ಸೈಯದ್ ಜಾಕೀರ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ತಾಲೂಕು ಜೆಡಿಎಸ್ ಅಧ್ಯಕ್ಷ ಕನ್ನಪ್ಪ ಬೆಳಲಮಕ್ಕಿ, ಅನಾರೋಗ್ಯದ ಕಾರಣ ಹೇಳಿ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಹೇಳಿದ್ದ ಸೈಯದ್ ಜಾಕೀರ್, ಬಳಿಕ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಿ ಅವರ ಜೊತೆ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿರುವುದು ಜೆಡಿಎಸ್ ಪಕ್ಷಕ್ಕೆ ಬಗೆದಿರುವ ದ್ರೋಹವಾಗಿದೆ ಎಂದಿದ್ದಾರೆ.