ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಮಗೆ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪಕ್ಷದಿಂದ ಸಿಡಿದೆದ್ದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಜಗದೀಶ್ ಶೆಟ್ಟರ್ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿದ್ದರು. ಆದರೆ ಅವರು ಬಿಜೆಪಿಯ ಮಹೇಶ್ ಟೆಂಗಿನಕಾಯಿ ವಿರುದ್ಧ ಪರಾಭವಗೊಂಡಿದ್ದಾರೆ.
ಅವರ ಸೋಲಿನ ಬಳಿಕ ಕಾಂಗ್ರೆಸ್ ನಲ್ಲಿ ಹೊಸ ಲೆಕ್ಕಾಚಾರ ಶುರುವಾಗಿದೆ ಎನ್ನಲಾಗಿದ್ದು, ಲಿಂಗಾಯತ ಸಮುದಾಯದ ಪ್ರಮುಖ ನಾಯಕರಾಗಿರುವ ಜಗದೀಶ್ ಶೆಟ್ಟರ್ ಅವರನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು ಎಂಬ ನಿಲುವು ತಳೆಯಲಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಶೆಟ್ಟರ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ಮಂತ್ರಿಮಂಡಲಕ್ಕೆ ಸೇರ್ಪಡೆ ಮಾಡಿಕೊಳ್ಳುವ ಚಿಂತನೆ ನಡೆದಿದೆ.
ಅಲ್ಲದೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಪ್ರಹ್ಲಾದ್ ಜೋಶಿ ವಿರುದ್ಧ ಕಣಕ್ಕಿಳಿಸಲು ಸಿದ್ಧತೆಗಳು ನಡೆಯುತ್ತಿದ್ದು, ಶೀಘ್ರದಲ್ಲಿಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಜಗದೀಶ್ ಶೆಟ್ಟರ್ ಜೊತೆ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ಹೇಳುತ್ತಿವೆ. ಶೆಟ್ಟರ್ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಸುಲಭವಾಗಿ ಗೆಲ್ಲಬಹುದು ಎಂಬ ಲೆಕ್ಕಾಚಾರ ಇದರ ಹಿಂದಿದೆ.