ಸಿಬಿಐ ನೂತನ ನಿರ್ದೇಶಕರಾಗಿ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ, ಡಿ.ಕೆ. ಶಿವಕುಮಾರ್ ಅವರನ್ನು ಟಾರ್ಗೆಟ್ ಮಾಡುವ ಸಲುವಾಗಿಯೇ ದ್ವೇಷ ರಾಜಕಾರಣಕ್ಕಾಗಿ ಕೇಂದ್ರ ಸರ್ಕಾರ ಈ ನೇಮಕ ಮಾಡಿದೆ ಎಂದು ಆರೋಪಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರವೀಣ್ ಸೂದ್ ಕಾರ್ಯವೈಖರಿ ಕುರಿತು ಈ ಹಿಂದೆ ಡಿ.ಕೆ. ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದರು. ಅವರನ್ನು ನಾಲಾಯಕ್ ಎಂದಿದ್ದರು. ಈ ಹಿನ್ನೆಲೆಯನ್ನು ಮುಂದಿಟ್ಟುಕೊಂಡೇ ಕೇಂದ್ರದ ಬಿಜೆಪಿ ಸರ್ಕಾರ ಈ ನೇಮಕ ಮಾಡಿದೆ ಎಂದು ಅಭಿಪ್ರಾಯಪಟ್ಟರು.
ಇನ್ನು ರಾಜ್ಯದ ಮುಖ್ಯಮಂತ್ರಿ ಆಯ್ಕೆ ಕುರಿತಂತೆ ಪ್ರತಿಕ್ರಿಸಿದ ರಾಜಣ್ಣ, ಸಿದ್ದರಾಮಯ್ಯನವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದು ನೂರಕ್ಕೆ ನೂರು ಖಚಿತ. ಹೈಕಮಾಂಡ್ ಕೂಡ ಸಿದ್ದರಾಮಯ್ಯ ಪರ ಒಲವು ಹೊಂದಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಖ್ಯಮಂತ್ರಿ ನೇಮಕ ಮಾಡುವ ಸಲುವಾಗಿ ವಿಳಂಬ ಮಾಡುತ್ತಿದ್ದಾರೆ. ಇಂದು ಸಂಜೆಯೊಳಗಾಗಿ ಘೋಷಣೆ ಹೊರಬೀಳಲಿದೆ ಎಂದರು.