ಬೆಂಗಳೂರು: ಈ ಚುನಾವಣೆ ಬಿಜೆಪಿ ಪಾಲಿಗೆ ನಿರಾಶಾದಾಯಕ ಫಲಿತಾಂಶ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬೇಸರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಪಕ್ಷದ ಸೋಲನ್ನು ನಾನು ಸವಾಲಾಗಿ ಸ್ವೀಕರಿಸುತ್ತೇನೆ. ಸೋಲಿಗೆ ಕಾರಣವಾದ ಅಂಶಗಳನ್ನು ಪರಾಮರ್ಶೆ ಮಾಡಿಕೊಳ್ಳುತ್ತೇವೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಶ್ರಮಿಸುತ್ತೇವೆ ಎಂದರು.
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಬದಲಾವಣೆಯನ್ನು ವರಿಷ್ಠರು ನಿರ್ಧರಿಸುತ್ತಾರೆ. ಪಕ್ಷದ ಸೋಲಿಗೆ ಬಿ.ಎಲ್.ಸಂತೋಷ್ ಕಾರಣ ಎಂಬ ಆರೋಪವಿದೆ. ಸೋಲಿನ ಹೊಣೆ ರಾಜ್ಯ ಬಿಜೆಪಿ ಘಟಕದ್ದು. ಎಲ್ಲಿ ಏನು ತಪ್ಪಾಗಿದೆ ಎಂಬುದನ್ನು ನಾವು ವಿಮರ್ಶೆ ಮಾಡುತ್ತೇವೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 330ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿದರು.