ನವದೆಹಲಿ: ರಾಜ್ಯದ ಮುಖ್ಯಮಂತ್ರಿ ಆಯ್ಕೆಗಾಗಿ 5 ದಿನಗಳಿಂದ ನಡೆದ ಕಸರತ್ತು ಮುಕ್ತಾಯವಾಗಿದೆ. ಮಧ್ಯರಾತ್ರಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದ್ದು, ಕಳೆದ ಐದು ದಿನಗಳ ಹೈಡ್ರಾಮಾಕ್ಕೆ ತೆರೆ ಬಿದ್ದಿದೆ.
ಸಿದ್ದರಾಮಯ್ಯ ಅವರಿಗೆ ಎರಡನೇ ಬಾರಿಗೆ ಮುಖ್ಯಮಂತ್ರಿ ಪಟ್ಟ ಕಟ್ಟಲು ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಪಟ್ಟ ಕಟ್ಟಲು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಕೈಗೊಂಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸರ್ವಾನುಮತದ ನಿರ್ಣಯ ಕೈಗೊಂಡಿದ್ದಾರೆ.
ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ರಣದೀಪ್ ಸಿಂಗ್ ಸುರ್ಜೇವಾಲಾ, ಕೆ.ಸಿ. ವೇಣುಗೋಪಾಲ್ ಹಾಗೂ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಗಳಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸರ್ವಾನುಮತದ ನಿರ್ಣಯ ಕೈಗೊಂಡು ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಹುದ್ದೆಗೆ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಿದ್ದಾರೆ ಎಂದು ಹೇಳಲಾಗಿದೆ.