ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಗಳಿಸಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ 8 ಮಂದಿ ಸಚಿವರು ಈಗಾಗಲೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ಹಗ್ಗಜಗ್ಗಾಟ ನಡೆದಿದ್ದು, ಅಂತಿಮವಾಗಿ ಸಿದ್ದರಾಮಯ್ಯನವರನ್ನು ಆಯ್ಕೆ ಮಾಡಲಾಗಿದೆ. ಆದರೆ ಇಬ್ಬರ ನಡುವೆ ತಲಾ ಎರಡೂವರೆ ವರ್ಷಗಳ ಕಾಲ ಅಧಿಕಾರ ಹಂಚಿಕೆಯಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಇದರ ಮಧ್ಯೆ ತುಮಕೂರಿನಲ್ಲಿ ಮಾತನಾಡಿದ್ದ ಸಚಿವ ಎಂ.ಬಿ. ಪಾಟೀಲ್, ಅಧಿಕಾರ ಹಂಚಿಕೆ ಕುರಿತು ಯಾವುದೇ ಮಾತುಕತೆ ನಡೆದಿಲ್ಲ ಸಿದ್ದರಾಮಯ್ಯನವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಹೇಳಿಕೆ ನೀಡಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು.
ಇದೀಗ ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಪವರ್ ಶೇರಿಂಗ್ ಬಗ್ಗೆ ಈ ಹಂತದಲ್ಲಿ ಮಾತನಾಡುವುದು ಅಪ್ರಸ್ತುತ. ಈ ವಿಚಾರವನ್ನು ಕಾಂಗ್ರೆಸ್ ಹೈಕಮಾಂಡ್ ಹಾಗೂ ಸಿಎಂ ತೀರ್ಮಾನಿಸುತ್ತಾರೆ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.