ಬೆಂಗಳೂರು: ಇಂದು ನಡೆಯಬೇಕಿದ್ದ ಸಚಿವ ಸಂಪುಟ ಸಭೆಯನ್ನು ಶುಕ್ರವಾರಕ್ಕೆ ಮುಂದೂಡಲಾಗಿದ್ದು, ಗ್ಯಾರಂಟಿ ಯೋಜನೆಗಳ ಜಾರಿ ಕುರಿತಾಗಿ ತೀರ್ಮಾನ ಕೈಗೊಳ್ಳಲಾಗುವುದು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಂಪುಟ ಸಭೆ ನಡೆಯಲಿದ್ದು, ಸಭೆಯ ನಂತರ ಸಿಎಂ ಗ್ಯಾರಂಟಿ ಯೋಜನೆಗಳ ಘೋಷಣೆ ಮಾಡಲಿದ್ದಾರೆ. ರಾಜ್ಯದ ಜನತೆಗೆ ನೀಡಿದ ಭರವಸೆಯಂತೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ, ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ನೀಡುವ ಅನ್ನ ಭಾಗ್ಯ ಹಾಗೂ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಶಕ್ತಿ ಯೋಜನೆಗಳ ಅನುಷ್ಠಾನ ಕುರಿತಾಗಿ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು ಸಿಎಂ ಘೋಷಣೆ ಮಾಡಲಿದ್ದಾರೆ.
ಈ ಯೋಜನೆಗಳ ಅನುಷ್ಠಾನಕ್ಕೆ ಷರತ್ತು ಮತ್ತು ಮಾನದಂಡ ಸೇರಿದಂತೆ ವಿವಿಧ ವಿಷಯಗಳು ಬಗ್ಗೆ ಚರ್ಚೆ ನಡೆಸಿ ಘೋಷಣೆ ಮಾಡುವ ಸಾಧ್ಯತೆ ಇದೆ. ಶುಕ್ರವಾರ ಬೆಳಗ್ಗೆ 11 ಗಂಟೆಗೆ ಕ್ಯಾಬಿನೆಟ್ ಸಭೆ ನಡೆಯಲಿದ್ದು, ಬಡವರು, ಮಧ್ಯಮ ವರ್ಗದವರಿಗೆ ಅನುಕೂಲವಾಗುವಂತೆ ಮಾನದಂಡಗಳನ್ನು ಸರಳೀಕರಣಗೊಳಿಸಿ ಯೋಜನೆ ಜಾರಿಗೊಳಿಸಲಾಗುವುದು ಎಂದು ಹೇಳಲಾಗಿದೆ.
ಆಗಸ್ಟ್ ನಲ್ಲಿ ವರಮಹಾಲಕ್ಷ್ಮಿ ಹಬ್ಬದ ದಿನ ಅಥವಾ ಗೌರಿ ಹಬ್ಬದ ದಿನ ಮಹಿಳೆಯರಿಗೆ ಬಾಗಿನ ರೂಪದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಲಿದ್ದು, ಮನೆಯ ಯಜಮಾನಿಗೆ ಎರಡು ಸಾವಿರ ರೂಪಾಯಿ ನೀಡಲಾಗುವುದು. ಸ್ವಾತಂತ್ರ್ಯ ದಿನಾಚರಣೆ ಕೊಡುಗೆಯಾಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.