ರೈಲು ಅಪಘಾತ ಸಂಭವಿಸಿದ ಒಡಿಶಾದ ಬಾಲಸೋರ್ಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.
ಬಾಲಸೋರ್ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ನೊಂದ ಕುಟುಂಬಗಳ ಜೊತೆಗೆ ಕೇಂದ್ರ ಸರ್ಕಾರ ಇದೆ. ರೈಲು ದುರಂತವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸುವಂತೆ ಸೂಚನೆ ನೀಡಲಾಗಿದೆ. ದುರಂತಕ್ಕೆ ಕಾರಣರಾದವರನ್ನು ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ. ದುರಂತ ಪಾಠ ಕಲಿಸಿದೆ, ಮುಂದೆ ಹೀಗೆ ಆಗದಂತೆ ಎಚ್ಚರಿಕೆ ವಹಿಸುತ್ತೇವೆ. ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ. ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆಯನ್ನು ಒದಗಿಸುತ್ತೇವೆ ಎಂದು ಹೇಳಿದ್ದಾರೆ.
ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ಭೇಟಿ ಮಾಡಿದ ಅವರು, ಈ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಕಂಡು ಬಂದವರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದ್ದಾರೆ.
ಇದೊಂದು ನೋವಿನ ಘಟನೆ. ಇದು ಗಂಭೀರ ಘಟನೆ, ಪ್ರತಿ ಕೋನದಿಂದ ತನಿಖೆಗೆ ಸೂಚನೆ ನೀಡಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು. ಹಳಿ ಮರುಸ್ಥಾಪನೆಗೆ ರೈಲ್ವೆ ಶ್ರಮಿಸುತ್ತಿದೆ ಎಂದು ಹೇಳಿದ್ದಾರೆ.