ಲೈಂಗಿಕ ಕಿರುಕುಳದ ಆರೋಪದ ಮೇಲೆ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಸರ್ಕಾರ ಮಾತುಕತೆಗೆ ಆಹ್ವಾನಿಸಿದೆ.
ಇದೇ ವಿಷಯಗಳ ಕುರಿತು ಚರ್ಚಿಸಲು ಕುಸ್ತಿಪಟುಗಳು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಕೆಲವೇ ದಿನದ ನಂತರ ಸರ್ಕಾರ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಮಾತುಕತೆಗೆ ಆಹ್ವಾನಿಸಿದೆ.
“ಸರ್ಕಾರವು ಕುಸ್ತಿಪಟುಗಳೊಂದಿಗೆ ಅವರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಸಿದ್ಧವಾಗಿದೆ. ನಾನು ಮತ್ತೊಮ್ಮೆ ಕುಸ್ತಿಪಟುಗಳನ್ನು ಅದಕ್ಕಾಗಿ ಆಹ್ವಾನಿಸಿದ್ದೇನೆ” ಎಂದು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಟ್ವೀಟ್ ಮಾಡಿದ್ದಾರೆ.
ಕುಸ್ತಿಪಟುಗಳು ಶನಿವಾರ ಅಮಿತಾ ಶಾ ಅವರೊಂದಿಗೆ ತಡರಾತ್ರಿ ಸಭೆ ನಡೆಸಿದ್ದರು. ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್, ಸಂಗೀತಾ ಫೋಗಟ್ ಮತ್ತು ಸತ್ಯವರ್ತ್ ಕಡಿಯನ್ ಸೇರಿದಂತೆ ಕುಸ್ತಿಪಟುಗಳ ತಂಡ ಅಮಿತ್ ಶಾ ಅವರೊಂದಿಗೆ ತಡರಾತ್ರಿ 1 ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿತು.
ಅಪ್ರಾಪ್ತ ವಯಸ್ಕರು ಸೇರಿದಂತೆ ಏಳು ಮಹಿಳಾ ಕುಸ್ತಿಪಟುಗಳು ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ನಿಷ್ಪಕ್ಷಪಾತ ತನಿಖೆ ನಡೆಸಿ ಕುಸ್ತಿ ಸಂಸ್ಥೆಯ ಮುಖ್ಯಸ್ಥರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ಕುಸ್ತಿಪಟುಗಳು ಒತ್ತಾಯಿಸಿದ್ದಾರೆ.