ಬೆಂಗಳೂರು: ಕೇಂದ್ರ ಸರ್ಕಾರದ ಬಳಿ ಅಕ್ಕಿ ದಾಸ್ತಾನು ಇರುತ್ತದೆ. ಆದರೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡುತ್ತಿಲ್ಲ. ಮಲತಾಯಿ ಧೋರಣೆ ಅನುಸರಿಸುತ್ತಿದೆ. ಬಿಜೆಪಿ ನಾಯಕರಿಗೆ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ಕಿಡಿ ಕಾರಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಬಲವಾಗುತ್ತೆ ಎಂಬ ಭಯ ಅವರಿಗೆ. ಹಾಗಾಗಿ ರಾಜಕೀಯವಾಗಿ ಷಡ್ಯಂತ್ರ ನಡೆಸಿದೆ. ನಮ್ಮ ಸರ್ಕಾರ 7 ಕೆಜಿ ಅಕ್ಕಿ ಕೊಟ್ಟಿರುವುದನ್ನು ಬಿಜೆಪಿ ಸರ್ಕಾರ ಕಡಿಮೆ ಮಾಡಿದ್ರು. ಬಿಜೆಪಿಯವರು ಎಡಬಿಡಂಗಿಗಳು. ಸೋಲಿನ ಹತಾಷೆಯಲ್ಲಿ ಅವರು ಏನು ಮಾಡುತ್ತಿದ್ದಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಅವರನ್ನು ಅವರ ಪಕ್ಷದವರೇ ಸೋಲಿಸಿದ್ದಾರೆ ಎಂಬ ಹತಾಶೆಯಲ್ಲಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.