ಬೆಂಗಳೂರು: ಬಿಪರ್ ಜಾಯ್ ಚಂಡಮಾರುತದ ರೌದ್ರಾವತಾರಕ್ಕೆ ಗುಜರಾತ್ ನಲುಗಿದ್ದು, ಕರ್ನಾಟಕದ ಮೇಲೂ ಚಂಡಮಾರುತದ ಪರಿಣಾಮ ಬೀರುತ್ತಿದೆ. ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಂಡಮಾರುತ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡದ ಸಮುದ್ರದಲ್ಲಿ ಬೃಹತ್ ಗಾತ್ರದ ಅಲೆಗಳು ಆರ್ಭಟಿಸಲಿದ್ದು, 10 ಅಡಿಗೂ ಹೆಚ್ಚು ಎತ್ತರದವರೆಗೆ ಅಲೆ ಏಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕಡಲ ತೀರದಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ.
ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನು ಗುಜರಾತ್ ಕಡಲತೀರದಿಂದ ಕೇವಲ 150 ಕಿ.ಮೀ ದೂರದಲ್ಲಿ ಬಿಪರ್ ಜಾಯ್ ಚಂಡಮಾರುತವಿದ್ದು, ಮಧ್ಯಾಹ್ನ ಮೂರು ಗಂಟೆ ವೇಳೆಗೆ ಮಾಂಡವಿ ಪ್ರದೇಶಕ್ಕೆ ಅಪ್ಪಳಿಸಲಿದೆ. ಈ ಹಿನ್ನೆಲೆಯಲ್ಲಿ 9 ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.