ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರ ನಿರಾಕರಿಸಿದೆ ಎಂದು ಆರೋಪಿಸಿ ಒಂದೆಡೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿದರೆ ಮತ್ತೊಂದೆಡೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದೆ.
ಬೆಂಗಳೂರಿನ ಆನಂದ್ ರಾವ್ ವೃತ್ತದಲ್ಲಿ ಮಾಜಿ ಸಚಿವ ಆರ್. ಅಶೋಕ್ ನೇತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದೆ. ಈಗ ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿದೆ ಎಂದು ಸುಳ್ಳು ಆರೋಪ ಮಾಡುತ್ತಿದೆ ಎಂದು ಸರ್ಕಾರದ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.
ಒಂದೆಡೆ ಮಳೆ, ಇನ್ನೊಂದೆಡೆ ಪ್ರತಿಭಟನೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಬಿಜೆಪಿ ನಾಯಕರ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಪೊಲೀಸರು ಮಾಜಿ ಸಚಿವ ಆರ್. ಅಶೋಕ್, ಎಂ ಎಲ್ ಸಿ ರವಿಕುಮಾರ್, ಚಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಬಿಜೆಪಿ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.