ಬೆಂಗಳೂರು: ರಾಜ್ಯದಲ್ಲಿ ಇನ್ನೂ 5 ದಿನ ಬಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಳೆ ಕುರಿತಾಗಿ ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಂಗಳವಾರ ಉತ್ತಮ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಮುಂಗಾರು ಚುರುಕುಗೊಂಡಿದ್ದು ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನದಿಂದ ಉತ್ತಮ ಮಳೆ ಆಗುತ್ತಿದೆ. ಬುಧವಾರ ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮುಂದಿನ ಐದು ದಿನ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಜೂನ್ 23 ರ ನಂತರ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.