ಬೆಂಗಳೂರು: 16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾಗಿರುವ ಶಾಸಕರಿಗೆ ನೆಲಮಂಗಲದ ಕ್ಷೇಮವನದಲ್ಲಿ ಮೂರು ದಿನಗಳ ತರಬೇತಿ ಶಿಬಿರ ಏರ್ಪಡಿಸಲಾಗಿದ್ದು, ಇಂದು ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ನೆರವೇರಿಸಲಿದ್ದಾರೆ.
ಇಂದಿನಿಂದ ಜೂನ್ 28 ರವರೆಗೆ ಮೂರು ದಿನಗಳ ಕಾಲ ತರಬೇತಿ ಶಿಬಿರ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಕಾನೂನು ಸಚಿವ ಹೆಚ್ ಕೆ ಪಾಟೀಲ್, ವಿಶೇಷ ಆಹ್ವಾನಿತರಾಗಿ ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್, ಜಮೀರ್ ಅಹ್ಮದ್ ಭಾಗಿಯಾಗಲಿದ್ದಾರೆ. ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಹಿರಿಯ ಸದಸ್ಯರು ಶಿಬಿರದಲ್ಲಿ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಿದ್ದಾರೆ. ಪ್ರತಿದಿನ ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ಆರೋಗ್ಯಕ್ಕೆ ಸಂಬಂಧಿಸಿದ ಚಟುವಟಿಕೆಗಳು ನಡೆಯಲಿವೆ. ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಭಾಪತಿ ಬಿ.ಎಲ್. ಶಂಕರ್, ಸಚಿವ ಕೃಷ್ಣಭೈರೇಗೌಡ, ಎ.ಹೆಚ್. ವಿಶ್ವನಾಥ್, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಮಾಜಿ ಶಾಸಕ ಮುಖ್ಯಮಂತ್ರಿ ಚಂದ್ರು ಮೊದಲಾದವರು ಉಪನ್ಯಾಸ ನೀಡಲಿದ್ದಾರೆ.