ಬೆಂಗಳೂರು: ಕಾಯಂ ನೇಮಕಾತಿಗಾಗಿ ಕಾಯುತ್ತಿರುವ ಗುತ್ತಿಗೆ ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಶ್ರಾವಣದ ವೇಳೆಗೆ ಪೌರಕಾರ್ಮಿಕರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ.
ಬಿಬಿಎಂಪಿ ಸೇರಿದಂತೆ ರಾಜ್ಯದ 32 ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ಹಾಗೂ ನೇರ ವೇತನ ಪಾವತಿ ಅಡಿ ಕಾರ್ಯ ನಿರ್ವಹಿಸುತ್ತಿರುವ 40 ಸಾವಿರಕ್ಕೂ ಅಧಿಕ ಪೌರಕಾರ್ಮಿಕರನ್ನು ಹಂತ ಹಂತವಾಗಿ ಕಾಯಂಗೊಳಿಸಲು ಹಿಂದಿನ ಸರ್ಕಾರ ನಿರ್ಧರಿಸಿ ಆದೇಶ ಹೊರಡಿಸಿದೆ.
ಆದೇಶದ ಅನ್ವಯ ರಾಜ್ಯದ ವಿವಿಧ ಮಹಾನಗರ ಪಾಲಿಕೆ ಮತ್ತು ಸ್ಥಳೀಯ ಸಂಸ್ಥೆಗಳ 7,460 ಮತ್ತು ಬಿಬಿಎಂಪಿಯ 14,980 ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸಲಾಗುವುದು. ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದ್ದು, ಚುನಾವಣೆ ಕಾರಣದಿಂದ ವಿಳಂಬವಾಗಿದ್ದು, ಈಗ ಮತ್ತೆ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಒಂದು ತಿಂಗಳಲ್ಲಿ ಅಂತಿಮಗೊಂಡ ಪೌರಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.