ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 .ರೂ ನೀಡುವ ಗೃಹಲಕ್ಷ್ಮೀ ಯೋಜನೆ ಜಾರಿಗೆ ಮುಹೂರ್ತ ಫಿಕ್ಸ್ ಆಗಿದ್ದು, ಇದೇ ಜುಲೈ 14 ರಂದು ಯೋಜನೆಗೆ ಅಧಿಕೃತ ಚಾಲನೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಜುಲೈ 14 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗೃಹ ಲಕ್ಷ್ಮೀ ಯೋಜನೆ ಜಾರಿ ಕಾರ್ಯಕ್ರಮ ನಡೆಸಲು ಚಿಂತನೆ ನಡೆದಿದ್ದು, ಸಾಂಕೇತಿಕವಾಗಿ 10-15 ಮನೆಯ ಯಜಮಾನಿಯರಿಗೆ ಹಣ ವರ್ಗಾವಣೆ ಮಾಡಿ ಯೋಜನೆಗೆ ಅಧಿಕೃತ ಚಾಲನೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ಗೃಹಲಕ್ಷ್ಮೀ ಯೋಜನೆಗೆ ಸರ್ಕಾರದ ಸೇವಾಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಥವಾ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಭೌತಿಕವಾಗಿ ಅರ್ಜಿ ಸಲ್ಲಿಸಬಹುದು.
ಯಾವೆಲ್ಲಾ ದಾಖಲೆಗಳು ಬೇಕು..?
- ರೇಷನ್ ಕಾರ್ಡ್
- ಬ್ಯಾಂಕ್ ಪಾಸ್ಬುಕ್
- ಆಧಾರ್ ಕಾರ್ಡ್
- ಯಾವುದಾದರೂ ಗುರುತಿನ ಚೀಟಿ
ಗೃಹಲಕ್ಷ್ಮೀ ಯೋಜನೆಯಡಿ 2,000 ರೂ. ಪಡೆಯಲು ಎಪಿಎಲ್, ಬಿಪಿಎಲ್, ಅಂತ್ಯೋದಯ ಕಾರ್ಡ್ ಸೇರಿ ಯಾವುದಾದರೂ ಒಂದು ಇರಲೇಬೇಕು. ಯೋಜನೆಯ ಲಾಭ ಪಡೆಯಲು ತಪ್ಪು ಮಾಹಿತಿ ನೀಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ.
ಯೋಜನೆಗಾಗಿ ಪ್ರತ್ಯೇಕ ಆ್ಯಪ್ ಸಿದ್ದಪಡಿಸಲಾಗಿದೆ. ಈ ಆ್ಯಪ್ ಮೂಲಕ ಅರ್ಜಿ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ, ಶುಲ್ಕವೂ ಇರುವುದಿಲ್ಲ. ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆ್ಯಪ್ ರಚಿಸಲಾಗಿದ್ದು, ಇದರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.