ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ, ತಮಗೆ ಟಿಕೆಟ್ ಕೈತಪ್ಪುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಅವರನ್ನು ಬೆಂಬಲಿಸಿದ್ದರು.
ಅಲ್ಲದೆ ಡಾ. ರಾಜನಂದಿನಿ ಆ ಸಂದರ್ಭದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದು, ಮೂರು ತಿಂಗಳ ಬಳಿಕ ಇದೀಗ ಕಾಂಗ್ರೆಸ್, ಡಾ. ರಾಜನಂದಿನಿ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿದೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಹೆಸ್. ಸುಂದರೇಶ್ ಆದೇಶ ಹೊರಡಿಸಿದ್ದಾರೆ.
ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಮ್ಮ ಪುತ್ರಿ ಬಿಜೆಪಿ ಸೇರ್ಪಡೆಗೊಂಡಿದ್ದರ ಕುರಿತು ಬೇಸರ ವ್ಯಕ್ತಪಡಿಸಿದ್ದ ಕಾಗೋಡು ತಿಮ್ಮಪ್ಪ, ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಅವರನ್ನು ಬೆಂಬಲಿಸಿದ್ದರು. ಈ ಚುನಾವಣೆಯಲ್ಲಿ ಬಿಜೆಪಿಯ ಹರತಾಳು ಹಾಲಪ್ಪ ವಿರುದ್ಧ ಬೇಳೂರು ಗೋಪಾಲಕೃಷ್ಣ ಗೆಲುವು ಸಾಧಿಸಿದ್ದರು.