ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆಗೆ ಮೈತ್ರಿ ಕುರಿತಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಪರೋಕ್ಷವಾಗಿ ಸುಳಿವು ನೀಡಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪದ ಬಾಂಬ್ ಸಿಡಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬಿಜೆಪಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರು ಬೆಂಬಲಸಿದ್ದಾರೆ. ಈ ಮೂಲಕ ಹೆಚ್. ಡಿ.ಕುಮಾರಸ್ವಾಮಿ ಮೇಲೆ ಬಿಜೆಪಿ ನಾಯಕರು ಸಾಫ್ಟ್ ಕಾರ್ನರ್ ತಾಳಿದ್ದಾರೆ.
ಈ ನಡುವೆ ಕುಮಾರಸ್ವಾಮಿ ಅವರು ವಿಧಾನಸಭೆ ಚುನಾವಣೆ ಬಳಿಕ ದೆಹಲಿಗೆ ಹೋದ ಸಂದರ್ಭದಲ್ಲಿ ಬಿಜೆಪಿ ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ಮೈತ್ರಿಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ಹೇಳಲಾಗುತ್ತಿದೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಕುರಿತಂತೆ ಪರೋಕ್ಷವಾಗಿ ಮಾತನಾಡಿರುವ ಹೆಚ್.ಡಿ.ಕುಮಾರಸ್ವಾಮಿ, ನಾನು ವಿಶೇಷವಾಗಿ ಯಾರನ್ನೂ ಹೆಸರಿಸಲು ಬಯಸುವುದಿಲ್ಲ. ಏನು ಬೇಕಾದರೂ ಆಗಬಹುದು. ಇದು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ, ಮುಂದಿನ ದಿನಗಳಲ್ಲಿ ದೊಡ್ಡ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಕೇವಲ 1 ಸೀಟ್ ಮಾತ್ರ ಗೆಲ್ಲಲು ಶಕ್ತವಾಗಿತ್ತು. ಮುಂದಿನ ಲೋಕಸಭೆ ಚುನಾವಣೆಗೆ ಜೆಡಿಎಸ್ ನಡೆ ಏನು ಎಂಬುದು ಕಾದು ನೋಡಬೇಕಾಗಿದೆ.